ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನಿವಾಸಿ 21 ವರ್ಷದ ಸುಹಾನ ಬಂಧಿತ ಆರೋಪಿ. ಈಕೆ ಕುಂದಾಪುರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಮೇ 12 ರಂದು ನಗರದ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಡ್ರಗ್ಸ್ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈಕೆಯನ್ನು ಬಂಧಿಸಿದ್ದಾರೆ.
ಸುಹಾನಾಳಿಂದ ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಈಕೆ ಈ ಮಾದಕ ವಸ್ತುವನ್ನು ಚೆನ್ನೈನಿಂದ ತರಿಸಿಕೊಂಡು ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಶ್ರೀಮಂತ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯತ್ನಿಸುತ್ತಿದ್ದಳು.
ಕೇವಲ 21 ವರ್ಷದ ಈಕೆ ಈಗಾಗಲೇ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದತಿಳಿದು ಬಂದಿದೆ. ಈಕೆಯ ಮೇಲೆ ಈ ಹಿಂದೆ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಈಕೆಯ ವಿರುದ್ಧ ಡ್ರಗ್ಸ್ ಸಾಗಾಟ ಪ್ರಕರಣ ದಾಖಲಾಗಿದೆ.