ಮುಂಬೈ: ಮುಸ್ಲಿಮರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಬಿಜೆಪಿ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
2014 ರಲ್ಲಿ ಕಾಂಗ್ರೆಸ್-ಎನ್‌ಸಿಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 5 ರಷ್ಟು ಮೀಸಲಾತಿಯನ್ನು ಘೋಷಿಸಿತ್ತು. ಈ ಸಂಬಂಧ 2014 ರ ಚುನಾವಣೆಗೂ ಮುನ್ನ ಸುಗ್ರೀವಾಜ್ಞೆಯನ್ನೂ ಹೊರಡಿಸಿತ್ತು. ಆದರೆ 2014 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಈ ಸುಗ್ರೀವಾಜ್ಞೆ ರದ್ದಾಗಿತ್ತು.
ಇದೀಗ ಫಡ್ನವೀಸ್ ಸರ್ಕಾರ 2014 ಮತ್ತು 2015 ರಲ್ಲಿ ಹೊರಡಿಸಲಾಗಿದ್ದ ಎಲ್ಲಾ ಆದೇಶಗಳನ್ನು ರದ್ದುಗೊಳಿಸಿದೆ. ಸರ್ಕಾರದ ಈ ಕ್ರಮದ ವಿರುದ್ಧ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.