ಬೆಂಗಳೂರು: ಪ್ರಸಕ್ತ ಸಾಲಿನಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (NEET-UG) ಸಂಪೂರ್ಣವಾಗಿ ರದ್ದುಪಡಿಸಬೇಕು ಮತ್ತು ರಾಜ್ಯಗಳಿಗೆ ತಮ್ಮದೇ ಆದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ನಡೆಸಲು ಮುಕ್ತ ಅವಕಾಶ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನೀಟ್ ಪರೀಕ್ಷೆ ನಡೆಸುವಲ್ಲಿ ಕೇಂದ್ರ ಸರ್ಕಾರ ಪದೇ ಪದೇ ಎಡವುತ್ತಿದೆ. ಹಲವಾರು ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿ ವಿದ್ಯಾರ್ಥಿಗಳು ಅನ್ಯಾಕ್ಕೊಳಗಾಗುತ್ತಿದ್ದಾರೆ. ಪೋಷಕರೂ ಆತಂಕಕ್ಕೀಡಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ಸಿಇಟಿ ಪರೀಕ್ಷೆ ನಡೆಸಲು ರಾಜ್ಯಗಳಿಗೆ ಅಧಿಕಾರ ನೀಡುವಂತೆ ಆಗ್ರಹಪಡಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಅತ್ಯಂತ ಪಾರದರ್ಶಕ, ನ್ಯಾಯಸಮ್ಮತ ಮತ್ತು ವಿದ್ಯಾರ್ಥಿ ಸ್ನೇಹಿ ರೀತಿಯಲ್ಲಿ ಹಳೆಯ ಸಿಇಟಿ ವ್ಯವಸ್ಥೆಯನ್ನು ಪುನಃ ಜಾರಿಗೆ ತರಲು ಕೇಂದ್ರ ಸರ್ಕಾರ ಕೂಡಲೇ ಕಾನೂನುಬದ್ಧ ಅವಕಾಶ ಕಲ್ಪಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ಕೆಇಎ ಮಾದರಿ ಅತ್ಯಂತ ವಿಶ್ವಾಸಾರ್ಹ ಮತ್ತು ಪಾರದರ್ಶಕ:
ರಾಜ್ಯವು ಹಲವು ದಶಕಗಳಿಂದ ಕೆಇಎ ಮೂಲಕ ಶಿಸ್ತುಬದ್ಧ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಿಕೊಂಡು ಬಂದಿದೆ. ರಾಜ್ಯದ ಈ ಸಿಇಟಿ ವ್ಯವಸ್ಥೆಯು ಗ್ರಾಮೀಣ, ಮಧ್ಯಮ ವರ್ಗದ ಹಾಗೂ ಆರ್ಥಿಕವಾಗಿ ಒಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವಲ್ಲಿ ಯಶಸ್ವಿಯಾಗಿದೆ. ಇದು ಕೇವಲ ಪರೀಕ್ಷೆಯಾಗಿರದೆ, ಶುದ್ಧ ಪ್ರತಿಭೆ ಮತ್ತು ಕಠಿಣ ಪರಿಶ್ರಮಕ್ಕೆ ಮನ್ನಣೆ ನೀಡುವ ಅತ್ಯಂತ ವಿಶ್ವಾಸಾರ್ಹ ಮಾದರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.