ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್ ಅವರ ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಕೊಲೆ ಪ್ರಕರಣದಲ್ಲಿ 2025ರಲ್ಲಿ ದರ್ಶನ್‌ಗೆ ಜಾಮೀನು ಸಿಕ್ಕಿತ್ತು. ಅದರ ಬೆನ್ನಲ್ಲೇ, ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿರುವುದರಿಂದ ದರ್ಶನ್ ಅವರ ಗನ್ ಲೈಸೆನ್ಸ್ ಅನ್ನು ಪೊಲೀಸರು ಅಮಾನತುಗೊಳಿಸಿದ್ದರು. ಪೊಲೀಸರ ಈ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ದರ್ಶನ್ ಪರ ವಾದ ಮಂಡಿಸಿದ ವಕೀಲ ಸುನೀಲ್ ಕುಮಾರ್ ಎಸ್., ದರ್ಶನ್ ಅವರು 2008 ರಿಂದಲೂ ಅಧಿಕೃತವಾಗಿ ಬಂದೂಕು ಪರವಾನಗಿ ಹೊಂದಿದ್ದಾರೆ. ಪ್ರಕರಣವೊಂದರಲ್ಲಿ ಅವರ ಹೆಸರಿದೆ ಎಂಬ ಕಾರಣಕ್ಕೆ ಲೈಸೆನ್ಸ್ ಅಮಾನತು ಮಾಡಿರುವುದು ಸರಿಯಲ್ಲ. ಈಗಾಗಲೇ ಅವರು ಗನ್ ಅನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವಾದಿಸಿದರು.
ಈ ವಾದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್, "ಕೇವಲ ಹೆಸರಿದೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಂಡಿಲ್ಲ, ಅವರ ಮೇಲೆ ಗಂಭೀರ ಆರೋಪವಿರುವ ಕಾರಣಕ್ಕೆ ಪೊಲೀಸರು ಕ್ರಮ ಜರುಗಿಸಿದ್ದಾರೆ" ಎಂದು ಅಭಿಪ್ರಾಯಪಟ್ಟಿತು. ಆದರೂ, ಈ ಆದೇಶಕ್ಕೆ ಮಾರ್ಚ್ 6ರವರೆಗೆ ಮಧ್ಯಂತರ ತಡೆಯಾಜ್ಞೆ ನೀಡುವುದಾಗಿ ಕೋರ್ಟ್ ತಿಳಿಸಿದೆ.