ಯಾದಗಿರಿ: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿದೆ. ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಪ್ರಕರಣ ದಾಖಲು ಮಾಡಿಕೊಂಡ ನಂತರ ಯಾದಗಿರಿ ಎಸ್ ಪಿಗೆ ಪತ್ರ ಬರೆದಿರುವ ಆಯೋಗ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಪೊಲೀಸ್ ಇಲಾಖೆ ನೀಡುವ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಆಯೊಗದ ಅಧ್ಯಕ್ಷ ಶಶಿಧರ್ ಕೋಸುಂಬೆ ತಿಳಿಸಿದ್ದಾರೆ.
ಮುತ್ಯಾ ಅಪ್ರಾಪ್ತೆಯೊಂದಿಗೆ ಡ್ಯಾನ್ಸ್ ಮಾಡುವ ವೇಳೆ ಆಕೆಯ ಕುತ್ತಿಗೆ ಹಿಡಿದು ಎತ್ತಿ ಮಂಚದ ಮೇಲೆ ನಿಲ್ಲಿಸುವುದು, ಮೂಗು ಚಿವುಟುವುದು ಹಾಗೂ ಅಸಭ್ಯವಾಗಿ ಸ್ಪರ್ಶಿಸುವ ದೃಶ್ಯಗಳು ವಿಡಿಯೋದಲ್ಲಿ ಕಂಡುಬಂದಿವೆ. ಈತನ ವರ್ತನೆಗೆ ಅಲ್ಲಿ ಹಾಜರಿದ್ದ ನಾಗರೀಕರು ಆಕ್ಷೇಪ ವ್ಯಕ್ತಪಡಿಸಿದೆ ಇರುವುದಕ್ಕೂ ಆಕ್ರೋಶ ವ್ಯಕ್ತವಾಗಿದೆ.
ಈ ವಿಡಿಯೋ ಇನ್ ಸ್ಟಾಗ್ರಾಂ ಮತ್ತು ಫೇಸ್ ಬುಕ್ ನಲ್ಲಿ ವೈರಲ್ ಆಗಿದೆ. ಮುತ್ಯಾ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.