ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಜಿಮ್‌ನಲ್ಲಿ ಪರಿಚಯವಾದ ಯುವತಿಯನ್ನು ಪ್ರೀತಿಸುವ ನಾಟಕವಾಡಿ, ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ.ಹುಬ್ಬಳ್ಳಿಯ ವಿಜಯನಗರದ ನಿವಾಸಿ ಸಮೀರ್ ಎಂಬಾತ ಈ ಪ್ರಕರಣದ ಆರೋಪಿ. ವಿಕಾಸ ನಗರದ ಹಿಂದೂ ಯುವತಿಯನ್ನು ನಗರದ ಜಿಮ್ ಒಂದರಲ್ಲಿ ಪರಿಚಯಿಸಿಕೊಂಡಿದ್ದ ಸಮೀರ್, ನಂತರ ಸ್ನೇಹ ಬೆಳೆಸಿದ್ದ. ಈ ಸ್ನೇಹದ ಮರೆಯಲ್ಲಿ ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಸಂಚು ರೂಪಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಹಿಂದೂ ಸಂಘಟನೆಯ ಕಾರ್ಯಕರ್ತರು, ಸಮೀರ್‌ನನ್ನು ಹಿಡಿದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಯುವತಿಯನ್ನು ನಂಬಿಸಿ ಮತಾಂತರ ಮಾಡಲು ಹವಣಿಸುತ್ತಿದ್ದ ಇವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.ಸದ್ಯ ಹಳೇ ಹುಬ್ಬಳ್ಳಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದು ನಿಜಕ್ಕೂ ಮತಾಂತರದ ಸಂಚೇ ಅಥವಾ ವೈಯಕ್ತಿಕ ಸ್ನೇಹವೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹುಬ್ಬಳ್ಳಿಯಲ್ಲಿ ಪದೇ ಪದೇ ಇಂತಹ ಆರೋಪಗಳು ಕೇಳಿಬರುತ್ತಿರುವುದು ನಾಗರಿಕರಲ್ಲಿ ಆತಂಕ ಮೂಡಿಸಿದ್ದು, ಪೊಲೀಸರ ತನಿಖೆಯ ಬಳಿಕವಷ್ಟೇ ಸತ್ಯಾಂಶ ಹೊರಬರಬೇಕಿದೆ.