ಬೆಳಗಾವಿ: ಜಿಲ್ಲೆಯ ವಂಟಮೂರಿ ಎಂಬ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಪರಾಧಿಗಳಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ, ಶೋಭಾ, ಲಕ್ಕವ್ವ, ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ.
ನ್ಯಾಯಾದೀಶ .ಎಚ್.ಎಸ್.ಮಂಜುನಾಥ ಅವರು ಶಿಕ್ಷೆಯನ್ನು ಪ್ರಕಟಿಸಿದರು.ಶಿಕ್ಷೆ ಪ್ರಕಟವಾಗುತ್ತಿದ್ದಂತೆ ಅಪರಾಧಿಗಳು ಮತ್ತು ಅವರ ಕುಟುಂಬದ ಸದಸ್ಯರು ಕಣ್ಣೀರಿಟ್ಟರು.
ವಂಟಮೂರಿ ಗ್ರಾಮದಲ್ಲಿ ಪ್ರೇಮಿಗಳಿಬ್ಬರು ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿದ್ದರು. ಇವರು ಬೆಳಗಾವಿ ಕಚೇರಿಯಲ್ಲಿ ವಿವಾಹವಾಗಿದ್ದರು. ಇದರಿಂದ ಕೆರಳಿದ ಯುವತಿಯ ಸಂಬಂಧಿಕರು 2023ರ ಡಿಸೆಂಬರ್ 11ರಂದು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಅವರ ಮನೆಯನ್ನೂ ಧ್ವಂಸಗೊಳಿಸಿದ್ದರು.
ಈ ಹಲ್ಲೆ ಮತ್ತು ಮನೆ ಕೆಡವಿದ ವೀಡಿಯೋ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಆಕ್ರೋಶ ವ್ಯಕ್ತವಾಗಿತ್ತು.