2026-03-07 05:18:22

bjp jds remove congress govt hd kumaraswamySpeed News Kannada

bjp jds remove congress govt hd kumaraswamySpeed News Kannada

ಬೆಂಗಳೂರು: ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಅದಕ್ಕೆ ಇನ್ನೂ ಸಮಯ ಇದೆ. ಈಗಲೇ ಮಾತನಾಡಿದರೆ ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆಸಿದಂತೆ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಾವು ಇನ್ನೂ ಮಾಡಬೇಕಾದ ಕೆಲಸ ಬೇಕಾದಷ್ಟಿದೆ. ಈಗಲೇ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರಕಾರ ಇದೆ. ಅದನ್ನು ತೊಲಗಿಸಿ ಜನಪರ ಸರಕಾರ ತರಬೇಕು ಎನ್ನುವುದು ನನ್ನ ಉದ್ದೇಶ. ಈ ಭ್ರಷ್ಟ ಕೆಟ್ಟ ಸರಕಾರವನ್ನು ತೆಗೆಯುವುದೇ ನನ್ನ ಅಜೆಂಡಾ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಎರಡೂ ಸೇರಿ ಈ ಕೆಲಸ ಮಾಡುತ್ತೇವೆ ಎಂದರು.

ನಾನು ಇದುವರೆಗೂ) ಅನೇಕ ಸಲ ಹೇಳಿದ್ದೇನೆ. ರಾಜ್ಯದಲ್ಲಿ ಇರುವ ಜನ ವಿರೋಧಿ ಸರ್ಕಾರ ತೆಗೆಯಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಮೊದಲಿನಿಂದಲೂ ಇದನ್ನೇ ಹೇಳುತ್ತಿದ್ದೇನೆ ಎಂದರು.

ಸ್ಥಳೀಯ ಸಂಸ್ಥೆಗಳು ಅಥವಾ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಂಬಂಧಿಸಿದಂತೆ ಈವರೆಗೆ ಎರಡೂ ಪಕ್ಷಗಳ ನಡುವೆ ಮಾತುಕತೆ ನಡೆದಿಲ್ಲ. ಸಮಯ ಬಂದಾಗ ಖಂಡಿತಾ ಚರ್ಚೆ ಮಾಡುತ್ತೇವೆ. ಮೈತ್ರಿ ವಿಚಾರದಲ್ಲಿ ನಾನು, ನಮ್ಮ ಪಕ್ಷ ಮುಕ್ತವಾಗಿದ್ದೇವೆ. ಸಂದರ್ಭ ಬಂದಾಗ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ, ಮುಂದೆಯೂ ಗೊಂದಲ ಆಗುವುದಿಲ್ಲ. ಇದು ನನ್ನ ನಿಲುವು ಎಂದು ಕೇಂದ್ರ ಸಚಿವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಚುನಾವಣೆಗೆ ನಾವು ಕೂಡ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ನಿರಂತರವಾಗಿ ಸಭೆಗಳನ್ನು ಮಾಡುತ್ತಿದ್ದೇವೆ. ಇವತ್ತಿನ ಸಭೆಯಲ್ಲಿಯೂ ನಾವು ಮೈತ್ರಿ ವಿಷಯದ ಬಗ್ಗೆ ಚರ್ಚೆ ನಡೆಸಿಲ್ಲ. ಆ ಸಂದರ್ಭ ಬಂದಾಗ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿದರು.

ಗ್ರೇಟರ್ ಚುನಾವಣೆ ಸಿದ್ಧತಾ ಸಭೆ:

ಇದೇ ವೇಳೆ ಸಚಿವ ಕುಮಾರಸ್ವಾಮಿ ಅವರು ಗ್ರೇಟರ್ ಬೆಂಗಳೂರು ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು.

ನಗರದ ಎಲ್ಲಾ ವಿಧಾಸಭೆ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಸೇರಿದಂತೆ ಆಹ್ವಾನಿತ ಪ್ರಮುಖರ ಜತೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು. ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಈ ಸರಕಾರ ಚುನಾವಣೆಯನ್ನು ನಡೆಸುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ನಾವು ತಯಾರಿ ಮಾಡಿಕೊಳ್ಳಬೇಕು ಎಂದು ಮುಖಂಡರಿಗೆ ತಿಳಿಸಿದರು.

ಶಾಸಕರಾದ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಇ.ಕೃಷ್ಣಪ್ಪ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಹಿರಿಯ ಮುಖಂಡ ಗೊಟ್ಟಿಗೆರೆ ಮಂಜುನಾಥ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.