ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿ ಅಧಿಕಾರ ಕಳೆದುಕೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಮತ್ತೆ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ಕೊಲ್ಕತ್ತಾದಲ್ಲಿ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಬಿಜೆಪಿಯನ್ನು ದೆಹಲಿಯಲ್ಲಿ ಅಧಿಕಾರದಿಂದ ದೂರ ಮಾಡುವ ದಿನಗಳು ದೂರದಲ್ಲಿಲ್ಲ ಎಂದು ಹೇಳಿದ್ದಾರೆ.
ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ ಏನೇ ಆದರೂ ಬಿಜೆಪಿಯ ವಿರುದ್ಧದ ನಮ್ಮ ಹೋರಾಟ ನಿಲ್ಲುವುದಿಲ್ಲ. ನಮ್ಮ ಮನೆ ಧ್ವಂಸ ಮಾಡಿದರೂ, ನೋಟಿಸ್ ಕಳುಹಿಸಿದರೂ ನಾನು ತಲೆಬಾಗುವುದಿಲ್ಲ ಎಂದು ಗುಡುಗಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧವೂ ಹರಿಹಾಯ್ದ ಅವರು. ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇವೆ. ಕ್ಯಾಮೆರಾ ಮುಂದೆ ಹಣ ಸ್ವೀಕರಿಸುತ್ತಿರುವ ವ್ಯಕ್ತಿಯನ್ನೇ ಮುಖ್ಯಮಂತ್ರಿ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗಳಿಸಿ ಅಧಿಕಾರ ಹಿಡಿದಿದ್ದರೆ ಟಿಎಂಸಿ ಕೇವಲ 80 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಈ ಮೂಲಕ ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಟಿಎಂಸಿ ಹಿನ್ನೆಡೆ ಅನುಭವಿಸಿದೆ.
ಚುನಾವಣೆ ನಂತರ ರಾಜ್ಯದಾದ್ಯಂತ ಹಿಂಸಾಚಾರ, ಹಾಗೂ ಟಿಎಂಸಿ ಕಚೇರಿಗಳ ಮೇಲೆ ದಾಳಿ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೋಲ್ಕತಾ ಹೈಕೋರ್ಟ್ ಮೊರೆ ಹೋಗಿರುವ ಟಿಎಂಸಿ ಚುನಾವಣೋತ್ತರ ಹಿಂಸಾಚಾರದ ಕುರಿತು ನ್ಯಾಯಾಂಗ ಮೇಲ್ವಿಚಾರಣೆಯ ತನಿಖೆ ನಡೆಸುವಂತೆ ಮನವಿ ಮಾಡಿದೆ.