2026-05-28 11:17:21

ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ್ ಅವರ ಪರಿಚಯ|Speed News Kannada

ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ್ ಅವರ ಪರಿಚಯ|Speed News Kannada

ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ. ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು.  18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUI ಗೆ ಸೇರ್ಪಡೆಗೊಂಡು ಅನತಿ ಕಾಲದಲ್ಲಿಯೇ ಬೆಂಗಳೂರು ಜಿಲ್ಲೆಯ ಘಟಕದ ಅಧ್ಯಕ್ಷರಾದರು (1981-83)

ತದನಂತರ ವಿದ್ಯಾಭ್ಯಾಸಕ್ಕೆಂದು ಬೆಂಗಳೂರು ಸೇರಿದ ಡಿ.ಕೆ. ಶಿವಕುಮಾರ್ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು.  ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವಕಾಂಗ್ರೆಸ್‍ ಅಧ್ಯಕ್ಷರಾಗಿ ಕನಕಪುರ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ ಶಿಬಿರಗಳನ್ನು ವ್ಯವಸ್ಥೆಗೊಳಿಸಿ ಜನಮನವನ್ನು ಸೂರೆಗೊಂಡರು.

1985ರ ಸಾತನೂರು ವಿಧಾನಸಭಾಕ್ಷೇತ್ರದಲ್ಲಿ ಅಂದಿನ ಪ್ರಭಾವಿ ಜನತಾದಳ ಮುಖಂಡರಾದ ಹೆಚ್.ಡಿ. ದೇವೇಗೌಡ ಅವರ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಉತ್ತಮ ಅಭ್ಯರ್ಥಿ ಸಿಗುವುದು ದುರ್ಲಭವಾದಾಗ ಪಕ್ಷದ ವರಿಷ್ಠರ ಕಣ್ಣು ಡಿ.ಕೆ. ಶಿವಕುಮಾರ್ ಮೇಲೆ ಬಿತ್ತು.  ಹೀಗಾಗಿ ರಾಜಕಾರಣದ ಪರಿಚಯವೇ ಇಲ್ಲದಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಹೆಚ್.ಡಿ. ದೇವೇಗೌಡ ಅವರ ವಿರುದ್ದ ಸ್ಪರ್ಧಿಸಲು ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸಲಾಯಿತು.  ಸಾಕಷ್ಟು ಪ್ರಬಲ ಪ್ರತಿರೋಧವನ್ನೇ ತೋರಿದ ಶಿವಕುಮಾರ್ ಚುನಾವಣೆಯಲ್ಲಿ ದೇವೇಗೌಡರು ಅತ್ಯಂತ ಪ್ರಯಾಸದ ಜಯ ಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾದರು.

ನಂತರ ಕೆಲವೇ ದಿನಗಳಲ್ಲಿ 1987ರಲ್ಲಿ ಅವರು ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಗೊಂಡರು. 1989ರಲ್ಲಿ ಕಾಂಗ್ರೆಸ್ ಮುಖೇನ ಸಾತನೂರು ವಿಧಾನ ಸಭಾಕ್ಷೇತ್ರದಿಂದ ಸ್ಪರ್ಧಿಯನ್ನಾಗಿ ನಿಲ್ಲಿಸಲಾಯಿತು. ಅಭೂತಪೂರ್ವ ರೀತಿಯಲ್ಲಿ, ಕ್ಷೇತ್ರದಲ್ಲಿ ಬೇರೂರಿದ ಜನತಾದಳದ ಪ್ರಾಬಲ್ಯವನ್ನು ಮೊಟಕುಗೊಳಿಸಿದ ಶಿವಕುಮಾರ್ ಅತ್ಯಧಿಕ ಮತಗಳಿಂದ ಜಯಗಳಿಸಿದರು.

1991ರಲ್ಲಿ ಅಂದಿನ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್‍ ಅವರು ಅನಾರೋಗ್ಯದ ಕಾರಣ ಮುಖ್ಯಮಂತ್ರಿ ಪದವಿಯನ್ನು ತ್ಯಜಿಸಬೇಕಾಗಿ ಬಂದಾಗ ಅವರ ಉತ್ತರಾಧಿಕಾರಿಯನ್ನಾಗಿ ಸೋರೆಕೊಪ್ಪ ಬಂಗಾರಪ್ಪ ಅವರು ಸರ್ವಾನುಮತದಿಂದ ಆಯ್ಕೆಯಾಗುವಂತೆ ಮಾಡುವಲ್ಲಿ  ಶಿವಕುಮಾರ್ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದರು. ಇವರಿಗೆ ಬಂಧಿಖಾನೆ ಖಾತೆ ನೀಡಿದರು. ಆದರೂ ಕಾಂಗ್ರೆಸ್ ಪಕ್ಷದಲ್ಲಿದ್ದ ಹಲವು ವಿರೋಧಿಗಳ ರಾಜಕೀಯ ಪಿತೂರಿಯಿಂದಾಗಿ 1994ರಲ್ಲಿ ಪಕ್ಷದ ಟಿಕೆಟ್ ವಿರೋಧಿಸಲಾಯಿತು, ಧೃತಿಗೆಡದೆ ಶಿವಕುಮಾರ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಜಯಗಳಿಸಿ ಜಯದ ಪರಂಪರೆ ಮುಂದುವರೆಸಿದರು.

2004ರಲ್ಲಿ ಶ್ರೀ ಡಿ.ಕೆ. ಶಿವಕುಮಾರ್ ಸಾತನೂರು ವಿಧಾನಸಭಾ ಕ್ಷೇತ್ರದಿಂದ 4ನೇ ಭಾರಿ ಆರಿಸಿ ಬಂದರೂ ಕೂಡ ಕಾಂಗ್ರೆಸ್ ಪಕ್ಷ ಬಹುಮತಗಳಿಸುವಲ್ಲಿ ವಿಫಲವಾಯಿತು. ಸ್ವಂತ ಶಕ್ತಿಯ ಮೇಲೆ ಸರ್ಕಾರ ರಚಿಸಲು ಅಗತ್ಯವಾದ ಬಹುಮತವಿಲ್ಲದ ಕಾರಣ ಕೋಮವಾದಿ ಬಿ.ಜೆ.ಪಿ. ಪಕ್ಷ ಅಧಿಕಾರಕ್ಕೇರದಂತೆ ತಡೆಯಲು ದೇವೇಗೌಡ ನೇತೃತ್ವದ ಪಕ್ಷವಾದ ಜೆ.ಡಿ.ಎಸ್.(ಜಾತ್ಯಾತೀತ) ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಯಿತು.  ಹೀಗೆ ರಾಜ್ಯದಲ್ಲಿ ಪ್ರಥಮ ಬಾರಿಗೆ ಉದಯಿಸಿದ ಕಾಂಗ್ರೆಸ್-ಜೆ.ಡಿ.ಎಸ್.(ಜಾ), ಸಮ್ಮಿಶ್ರ ಸರ್ಕಾರದಲ್ಲಿ ಡಿ.ಕೆ. ಶಿವಕುಮಾರ್ ಗೆ ಸ್ಥಾನವಿರಲಿಲ್ಲ, ಏಕೆಂದರೆ ಅವರು ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿಯಾಗಬಾರದೆಂಬುದು ದೇವೇಗೌಡರು ಷರತ್ತು ವಿಧಿಸಿದ್ದರು.

ತಮ್ಮ ವಿರುದ್ದ ಶ್ರೀ ದೇವೇಗೌಡರು ನಡೆಸಿದ ಸೇಡಿನ ರಾಜಕಾರಣಕ್ಕೆ ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡುವಲ್ಲಿ ಶೀಘ್ರದಲ್ಲಿಯೇ ಯಶಸ್ವಿಯಾದರು. 2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ದ ರಾಜಕೀಯವಾಗಿ, ಸಾರ್ವಜನಿಕವಾಗಿ ಅಷ್ಟೇನು ಪರಿಚಿತರಲ್ಲದ ತೇಜಸ್ವಿನಿಗೌಡರವರನ್ನು ನಿಲ್ಲಿಸಿ ಗೆಲ್ಲಿಸುವ ಮೂಲಕ ಸೇಡು ತೀರಿಸಿಕೊಂಡರು.

1999ರಲ್ಲಿ ಎಸ್.ಎಂ. ಕೃಷ್ಣ ಪಾಂಚಜನ್ಯ ಮೊಳಗಿಸುವ ಮೂಲಕ ಚುನಾವಣಾ ಸಮರ ಆರಂಭಿಸಿದಾಗ, ಈ ಐತಿಹಾಸಿಕ ಯಾತ್ರೆಯನ್ನು ಆಯೋಜಿಸಿದವರು ಶ್ರೀ ಡಿ.ಕೆ. ಶಿವಕುಮಾರ್. 1999ರಲ್ಲಿ ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷ ಅನುಮತಿ ನೀಡಿತ್ತು. ಈ ಭಾರಿ ಅವರ ಎದುರಾಳಿ ಹೆಚ್.ಡಿ. ದೇವೇಗೌಡ ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ.  ನಿರೀಕ್ಷಿಸಿದಂತೆ ಕುಮಾರಸ್ವಾಮಿ ಚುನಾವಣೆಯಲ್ಲಿ ಸೋತರು.  ಶಿವಕುಮಾರ್ ಸತತ 3ನೇ ಬಾರಿಗೆ ಗೆಲುವು ಸಾಧಿಸಲು ಸಾಧ್ಯವಾಯಿತು.  ಕೃಷ್ಣ ಅವರು ಕ್ಯಾಬಿನೆಟ್‍ ದರ್ಜೆ ಸಚಿವರನ್ನಾಗಿ ನೇಮಿಸಿ ಮಹತ್ವದ ಸಹಕಾರ ಖಾತೆ ನಿಭಾಯಿಸಿದರು.

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಾಗ ಪಕ್ಷದಲ್ಲಿನ ವಿರೋಧಿಗಳು ಶಿವಕುಮಾರ್ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಕಪೋಲಕಲ್ಪಿತ ದಾಖಲೆಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಿ, ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ಸ್ಥಾನ ತಪ್ಪುವಂತೆ ಮಾಡಿದರು. ಏಳೇ ತಿಂಗಳ ಅಲ್ಪಅವಧಿಯ ನಂತರ ಶಿವಕುಮಾರ್ ಸಿದ್ಧರಾಮಯ್ಯ ಸಂಪುಟದಲ್ಲಿ ಇಂಧನ ಖಾತೆ ಪಡೆದುಕೊಂಡರು.

2018ರಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ನಂತರ ಹೆಚ್ಚುವರಿಯಾಗಿ ಕನ್ನಡ ಮತ್ತು ಸಂಸ್ಕøತಿ ಖಾತೆಯನ್ನು ಪಡೆದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ಅವರು ಮಾರ್ಚ್ 11, 2020ರಂದು  ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಿದರು.

ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷ 2023ರ ವಿಧಾನಸಭೆ ಚುನಾವಣೆಯಲ್ಲಿ 136 ಕ್ಷೇತ್ರಗಳಲ್ಲಿ ಗೆದ್ದು ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿತು. ಈ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ, ಜಲಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ನಡೆಸಿದರು. ಜಲಸಂಪನ್ಮೂಲ ಸಚಿವರಾಗಿ ಎತ್ತಿನ ಹೊಳೆ ಯೋಜನೆಗೆ ಇದ್ದ ಅಡೆತಡೆಗಳನ್ನು ನಿವಾರಿಸಿ ನೀರನ್ನು ಆ ಭಾಗದಿಂದ ಹೊರಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಧೇ ರೀತಿ ಬೆಂಗಳೂರಿನ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಿದ ಹೆಗ್ಗಳಿಕೆ ಇವರದ್ದಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.