ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಪರೀಕ್ಷಾ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡೆಯನ್ನು ಅಖಿಲ ಭಾರತೀಯ ಬ್ರಾಹ್ಮಣ ಮಹಾಸಭಾ ತೀವ್ರವಾಗಿ ಖಂಡಿಸಿದ್ದು, ಇದು ಧಾರ್ಮಿಕ ಭಾವನೆಗಳ ಮೇಲಿನ ದಾಳಿ ಎಂದು ಆರೋಪಿಸಿದೆ. ಕೆಇಎ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದರೂ ಸಹ, ಖಾಸಗಿ ಕಾಲೇಜುಗಳು ಇಂತಹ ಎಡವಟ್ಟು ಮಾಡುತ್ತಿರುವುದು ಮರುಕಳಿಸುತ್ತಿದೆ.
ಈ ಹಿನ್ನೆಲೆಯಲ್ಲಿ ಬ್ರಾಹ್ಮಣ ಮಹಾಸಭೆಯು ಸರ್ಕಾರಕ್ಕೆ ಪತ್ರ ಬರೆದಿದ್ದು, ಇಂತಹ ಘಟನೆಗಳನ್ನು ತಡೆಯಲು ಪ್ರತ್ಯೇಕ ಕಾನೂನು ಜಾರಿಗೆ ತರಬೇಕೆಂದು ಒತ್ತಾಯಿಸಿದೆ. ಅಲ್ಲದೆ, ಮುಂದಿನ ಎರಡು ದಿನಗಳಲ್ಲಿ ನಿಯೋಗವು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಲಿದೆ. ಶಾಸಕ ಸಿ.ಕೆ. ರಾಮಮೂರ್ತಿ ಅವರು ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಬ್ರಾಹ್ಮಣ ಸಂಘಟನೆಗಳು ಈಗಾಗಲೇ ನಗರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು, ಸರ್ಕಾರ ಈ ವಿಷಯದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.