2026-03-07 07:21:27

Case registered after bomb threat near Ullal Mosque | ಮಂಗಳೂರು ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪೋಸ್ಟ್ ಕೇಸ್ ದಾಖಲು | Speed News Kannada

Case registered after bomb threat near Ullal Mosque | ಮಂಗಳೂರು ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಪೋಸ್ಟ್ ಕೇಸ್ ದಾಖಲು | Speed News Kannada

ಮಂಗಳೂರು, ಮಾರ್ಚ್ 3: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಪೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಮಾಡಿದ ಕಿಡಿಗೇಡಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. 'ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಪೋಟಿಸುತ್ತೇನೆ, ಸಪೋರ್ಟ್ ಮಾಡಿ' ಎಂದು ಶಂಕರ್11916 ಎಂಬ ಇನ್‌ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು. ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತನಾಗಿ ಗುರುತಿಸಿಕೊಂಡು ಕೊಲೆಯಾಗಿದ್ದ ಸುಹಾಸ್ ಶೆಟ್ಟಿ ಅವರ ಭಾವಚಿತ್ರ ಹೊಂದಿದ್ದ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿದೆ ಎನ್ನಲಾಗಿದೆ. ಇದರಿಂದಾಗಿ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಘಟನೆ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿರುವ ಉಳ್ಳಾಲ ಪೊಲೀಸರು, ಕಮೆಂಟ್ ಹಾಕಿದ ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸಲು ಶೋಧ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಧಾರ್ಮಿಕ ದ್ವೇಷ ಹುಟ್ಟಿಸುವ, ಭಯ ಹುಟ್ಟಿಸುವ ರೀತಿಯ ಪೋಸ್ಟ್‌ಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು, ಪ್ರಚೋದನಕಾರಿ ಅಥವಾ ಭಯ ಹುಟ್ಟಿಸುವ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
ಮಂಗಳೂರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಮಾಡಿದ ಪ್ರಕರಣಗಳು ಇತ್ತೀಚೆಗೆ ಕೆಲವು ನಡೆದಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಇತ್ತೀಚೆಗಷ್ಟೇ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸೈಬರ್ ಕ್ರೈಂ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು. ಅದೇ ರೀತಿ, ನಗರದ ಶಾಂತಿಗೆ ಭಂಗ ತರುವ ರೀತಿಯಲ್ಲಿ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಿ, ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಶಬ್ದ ಬಳಸಿ ಪೋಸ್ಟ್ ಮಾಡಿದ್ದ ಗುಂಪಿನ ವಿರುದ್ಧ ಕೆಲವು ತಿಂಗಳ ಹಿಂದೆ ನಗರ ಪೊಲೀಸ್‌ ಆಯುಕ್ತರು ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದರು..
ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು, ಸೈಬ‌ರ್ ಪೊಲೀಸರು ಪ್ರತ್ಯೇಕ 'ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್' ಮೂಲಕ ನಿರಂತರ ನಿಗಾ ಇರಿಸಿದ್ದಾರೆ. ಕೇವಲ ಪೋಸ್ಟ್ ಮಾಡಿದವರಷ್ಟೇ ಅಲ್ಲದೆ, ಅಂತಹ ಪೋಸ್ಟ್‌ಗಳನ್ನು ಲೈಕ್ ಮಾಡುವ, ಶೇರ್ ಮಾಡುವ ಅಥವಾ ಪ್ರಚೋದನಕಾರಿ ಕಮೆಂಟ್ ಹಾಕುವವರ ವಿರುದ್ಧವೂ ಐಟಿ ಕಾಯ್ದೆ ಹಾಗೂ ಬಿಎನ್ಎನ್‌ಸ್ (BNS) ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.