ಬೆಂಗಳೂರು: ನಾಳೆ ಶನಿವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್ ಪಿ) ಸಭೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ವಿಷಯವನ್ನು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಯಾವುದೇ ಶಾಸಕರು ದೆಹಲಿಗೆ ಬರುವ ಅಗತ್ಯ ಇಲ್ಲ ಎಂದೂ ಹೇಳಿದ್ದಾರೆ.
ಶಾಸಕಾಂಗ ಪಕ್ಷದ ಸಭೆ ನಂತರ ಪ್ರಮಾಣವಚನ ಸ್ವೀಕಾರಕ್ಕೆ ದಿನಾಂಕ ನಿಗದಿಯಾಗಲಿದೆ. ವೀಕ್ಷಕರಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಣ್ ದೀಪ್ ಸಿಂಗ್ ಸುರ್ಜೇವಾಲ ಆಗಮಿಸಲಿದ್ದಾರೆ.
ಖಾಸಗಿ ಹೋಟೆಲ್ ನಲ್ಲಿ ನಡೆಯಲಿರುವ ಸಿಎಲ್ ಪಿ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ. ನಿರೀಕ್ಷೆಯಂತೆ ಡಿಕೆ ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾಗಲಿದ್ದಾರೆ.
ಅತ್ತ ದೆಹಲಿಯಲ್ಲೂ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರೂ ದೆಹಲಿಗೆ ತೆರಳಿದ್ದಾರೆ. ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿರುವ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ತಮ್ಮ ಭವಿಷ್ಯ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಡಿಕೆ ಶಿವಕುಮಾರ್ ಅವರೂ ಸಹ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಎಲ್ಲರನ್ನೂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕ ಆಹ್ವಾನಿಸುತ್ತಿದ್ದಾರೆ.