ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದ್ದು, ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ, ಚರ್ಚೆ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಕೂಡ ಉಪಸ್ಥಿತರಿದ್ದರು. ರಾಜ್ಯದ ರಾಜಕೀಯ ಬೆಳವಣಿಗೆಗಳು, ಸಚಿವ ಸಂಪುಟ ವಿಸ್ತರಣೆ, ಪ್ರಾದೇಶಿಕ ಮತ್ತು ಸಾಮಾಜಿಕ ಸಮತೋಲನ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ನೇಮಕಾತಿ, ಪಕ್ಷ ಸಂಘಟನೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತಂತೆ ಸುದೀರ್ಘ ಚರ್ಚೆ ನಡೆಸಿದ್ದರು.
ದೆಹಲಿಯಲ್ಲಿ ನಡೆದ ಸಮಾಲೋಚನೆಯ ಮುಂದುವರಿದ ಭಾಗವಾಗಿ ಈಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದಿದೆ. ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮತೋಲನ ಕಾಪಾಡುವ ಉದ್ದೇಶದಿಂದ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.