2026-03-07 05:10:17

CM Siddaramaiah Demands Central Approval | ಕೃಷ್ಣಾ ಮೇಲ್ದಂಡೆ ಮೇಕೆದಾಟು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನೀಡಬೇಕು ಸಿಎಂ ಸಿದ್ದರಾಮಯ್ಯ ಆಗ್ರಹ | Speed News Kannada

CM Siddaramaiah Demands Central Approval | ಕೃಷ್ಣಾ ಮೇಲ್ದಂಡೆ ಮೇಕೆದಾಟು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನೀಡಬೇಕು ಸಿಎಂ ಸಿದ್ದರಾಮಯ್ಯ ಆಗ್ರಹ | Speed News Kannada

ಹುಬ್ಬಳ್ಳಿ: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಅಣ್ಣಿಗೇರಿಗೆ ಯುಜಿಡಿ ಮಾಡುವ ಕುರಿತು ಬಜೆಟ್ ನಲ್ಲಿ ಚರ್ಚಿಸಲಾಗುವುದು. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. 
ಶಿರಗುಪ್ಪಿ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಯೋಗದಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ, ಭೂಮಿ ಪೂಜೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. 
ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಅಲ್ಲದೇ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ. ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಚಾಲನೆ ನೀಡಲಾಗಿರುತ್ತದೆ. ಈ ಯೋಜನೆ ಪ್ರಾರಂಭಕ್ಕೆ ಶಾಸಕ ಎನ್.ಎಚ್. ಕೋನರಡ್ಡಿ ಅವರ ಒತ್ತಾಸೆ ಕಾರಣವಾಗಿದೆ. ಈ ಯೋಜನೆಯಿಂದ ಸುಮಾರು 37 ಹಳ್ಳಿಗಳು ಹಾಗೂ 20 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ಪ್ರವಾಹ ಉಂಟಾಗುತ್ತಿತ್ತು. ರೂ. 150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸಾ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ. ಈಗಾಗಲೇ ಕಳಸಾ ಬಂಡೂರಿ ಯೋಜನೆಗೆ ಟೆಂಡರ್ ಕರೆದು ಏಜೆನ್ಸಿಗೆ ಒಪ್ಪಿಸಲಾಗಿದೆ. ಕೇಂದ್ರ ವನ್ಯಜೀವಿ ಮಂಡಳಿಯು ಅನುಮತಿ ಕೂಡಲೇ ನೀಡಬೇಕಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು. 
ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ. ಕೇಂದ್ರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಮಾಡಬೇಕು. ಮೇಕೆದಾಟು ಯೋಜನೆಗೆ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. 65 ಟಿಎಂಸಿ ಕುಡಿಯುವ ನೀರಿನ ಯೋಜನೆ ಇದಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರೂ.5300 ಕೋಟಿ ಕೊಡುತ್ತೇವೆ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಯಾವುದೇ ಹಣ ಇದುವರೆಗೂ ನೀಡಿಲ್ಲ. ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತೇವೆ ಎಂದು ಬಣ್ಣಿಸಿದ್ದರು. 2005 ರಲ್ಲಿ ಮನರೇಗಾ ಯೋಜನೆ ಜಾರಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಕಳೆದ  ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದೆ. ಯುವಕರಿಗೆ, ಮಹಿಳೆಯರಿಗೆ, ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆಯನ್ನು ಕೈ ಬಿಡಲಾಗಿದೆ ಎಂದು ಅವರು ತಿಳಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.