ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಪವನ್ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುವಾಹಟಿ ಹೈಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಂಗಳವಾರ ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ್ದ ನ್ಯಾಯಮೂರ್ತಿ ಪಾರ್ಥಿವಜ್ಯೋತಿ ಸೈಕಿಯಾ ಅವರ ಏಕಸದಸ್ಯ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅಂತಿಮ ಆದೇಶ ಹೊರಡಿಸಿದ ನ್ಯಾಯಾಲಯವು, ಖೇರಾ ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದಾಗಿ ಪವನ್ ಖೇರಾ ಅವರಿಗೆ ಬಂಧನದ ಭೀತಿ ಎದುರಾಗಿದೆ. ಗುವಾಹಟಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ, ಪವನ್ ಖೇರಾ ಅವರು ಈಗ ಸುಪ್ರೀಂ ಕೋರ್ಟ್‌ನ ಮೊರೆ ಹೋಗುವ ಸಾಧ್ಯತೆಯಿದೆ ಅಥವಾ ಸ್ಥಳೀಯ ನ್ಯಾಯಾಲಯದಲ್ಲಿ ಕಾನೂನು ಪ್ರಕ್ರಿಯೆಗಳನ್ನು ಎದುರಿಸಬೇಕಾಗುತ್ತದೆ. ಒಟ್ಟಾರೆಯಾಗಿ, ಕಾನೂನು ಹೋರಾಟದಲ್ಲಿ ಪವನ್ ಖೇರಾ ಅವರಿಗೆ ಸಿಗುತ್ತಿದ್ದ ‘ರಿಲೀಫ್’ ಸದ್ಯಕ್ಕೆ ಅಂತ್ಯಗೊಂಡಂತೆ ತೋರುತ್ತಿದ್ದು, ಅಸ್ಸಾಂ ಪೊಲೀಸರ ಮುಂದಿನ ನಡೆ ಕುತೂಹಲ ಮೂಡಿಸಿದೆ.