ಬೆಂಗಳೂರು : ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರೂ ಸೇರಿದಂತೆ ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು ಕಸ ಹಾಕಬಾರದು. ನಮಗೆ ಅನುದಾನಬೇಕು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ನಿನ್ನೆ ಅರವಿಂದ ಲಿಂಬಾವಳಿ, ಇಂದು ದೊಡ್ಡಬಳ್ಳಾಪುರ ಶಾಸಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಆರ್.ಅಶೋಕ್, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗ ಮುಂದೆ ಸುರಿಯಬೇಕೇ ಎಂದು ಪ್ರಶ್ನಿಸಿದರು
ಯಾವ ಉದ್ದೇಶಕ್ಕೆ ಬ್ಲಾಕ್ ಮೆಲ್ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇಬೇಕು. ಈ ಹಿಂದಿನಿಂದ ಎಲ್ಲಿ ಕಸ ಹಾಕಲಾಗುತ್ತಿದೆಯೋ ಅಲ್ಲಿಯೇ ಹಾಕಲಾಗುತ್ತಿದೆ. ಕ್ಷೇತ್ರಗಳಿಗೆ ಅನುದಾನ ನೀಡಲಿ ಎಂಬ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ ಎಂದು ಹೇಳಿದರು.
ಎಸ್.ಟಿ.ಸೋಮಶೇಖರ್, ಶಿವಣ್ಣ, ಕೃಷ್ಣಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಸ ಹಾಕಲು ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ. ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಷಯಗಳನ್ನು ಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್ ಹೆಚ್ಚಿದೆ, ಕಾಮಗಾರಿ ನಿಲ್ಲಿಸುತ್ತೇವೆ ಎಂದು ಗುತ್ತಿಗೆದಾರರ ಸಂಘ ತಿಳಿಸಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ದೂರು ನೀಡಲು ಅವರಿಗೆ ತಿಳಿಸಿ. ಅವರು ಮೊದಲು ಕಾಮಗಾರಿ ನಿಲ್ಲಿಸಲಿ ಎಂದು ಸವಾಲು ಹಾಕಿದರು.