ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್ ನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭವಾಗಿದೆ. ಮುಂಬರುವ ವಿಧಾನಸಭಾ ಉಪ ಚುನಾವಣೆ, ವಿಧಾನಪರಿಷತ್, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಕುರಿತು ಚರ್ಚೆ ನಡೆಯಲಿದೆ.
ಕಾರ್ಯಕಾರಿಣಿ ಕುರಿತು ಮಾಹಿತಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿ 1,250ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದು ತಿಳಿಸಿದರು.
ಮುಂದಿನ ಆರು ತಿಂಗಳು ಚುನಾವಣಾ ಪರ್ವ ಎನ್ನಬಹುದು. ಈ ನಿಟ್ಟಿನಲ್ಲಿ ಸಂಘಟನೆಯನ್ನು ಸಜ್ಜುಗೊಳಿಸುವುದರ ಬಗ್ಗೆ ಸಮಗ್ರ ಚರ್ಚೆ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು ಬಹುತೇಕ 3 ವರ್ಷ ತುಂಬುತ್ತಿದೆ. ರಾಜ್ಯದ ಕಾಂಗ್ರೆಸ್ ಸರಕಾರದ ವೈಫಲ್ಯತೆಗಳಿಂದ ಜನರು ಬೇಸತ್ತಿದ್ದಾರೆ. ಇಂಥ ಭ್ರಷ್ಟ- ಬಡವರ ವಿರೋಧಿ, ರೈತ ವಿರೋಧಿ, ಯುವಜನತೆಯ ವಿರೋಧಿ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಬಹಳ ಗಂಭೀರ ಚರ್ಚೆಗಳು ನಡೆಯಲಿದ್ದು ಹಲವು ನಿರ್ಣಯಗಳನ್ನೂ ಅಂಗೀಕರಿಸುವುದಾಗಿ ತಿಳಿಸಿದರು.
ಸಾರ್ವಜನಿಕ ಜೀವನದ 50 ವರ್ಷ;ಬಿಎಸ್‍ವೈ ಅಭಿನಂದನೆ
ಈ ನಾಡಿನ ರೈತನಾಯಕರು, ಮಾಜಿ ಮುಖ್ಯಮಂತ್ರಿಗಳು, ಹೋರಾಟಗಾರರಾದ ಬಿ.ಎಸ್. ಯಡಿಯೂರಪ್ಪನವರು ಸಾರ್ವಜನಿಕ ಜೀವನದ 50 ವರ್ಷಗಳನ್ನು ಪೂರೈಸಿದ್ದಾರೆ. ಜನಸಂಘ ಕಾಲದಿಂದ ಅವರು ಮಂಡ್ಯದಿಂದ ಶಿಕಾರಿಪುರಕ್ಕೆ ಹೋಗಿ ಇಲ್ಲಿನವರೆಗೆ ಅವರು ರಾಜ್ಯಕ್ಕೆ ಸೇವೆ ನೀಡಿದ್ದು, ನಗರಕ್ಕೆ ಸೀಮಿತವಾದ ಬಿಜೆಪಿಯನ್ನು ಹಳ್ಳಿ ಹಳ್ಳಿಗೂ ತೆಗೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿ ಬಿ.ಎಸ್. ಯಡಿಯೂರಪ್ಪನವರ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ ಎಂದರು.