ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಇಂದು ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಡಿಕೆ ಶಿಕುಮಾರ್ ಸಂವಿಧಾನದ ಪ್ರತಿ ಹಿಡಿದು ಅವರು ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಶಿವಕುಮಾರ್ ರಾಜ್ಯದ 25ನೇ ಮುಖ್ಯಮಂತ್ರಿಯಾಗಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಡಾ.ಬಿ.ಆರ್. ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನಂತರ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ನಂತರ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಅವರೂ ಪ್ರಮಾಣ ವಚನ ಸ್ವೀಕರಿಸಿದರು. ಎಲ್ಲರಿಗೂ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು.
ಎಂ.ಬಿ ಪಾಟೀಲ್ ಅವರು ಬಸವಣ್ಣ, ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನೂ ನುಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮುಖಂಡರಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೇರಳ ಸಿಎಂ ವಿ.ಡಿ.ಸತೀಶನ್, ತೆಲಂಗಾಂಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸುಖವೀಂದರ್ ಸಿಂಗ್ ಸುಖು ಸೇರಿದಂತೆ ಎಐಸಿಸಿ ಪ್ರಮುಖ ನಾಯಕರು ಭಾಗವಹಿಸಲಿದ್ದರು.
ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಮತ್ತು ಅವರ ಪತ್ನಿ ಹಾಗೂ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟರಾದ ಜಯಮಾಲಾ ಮತ್ತು ಶಿವರಾಜ್‌ಕುಮಾರ್ ಅವರೂ ಹಾಜರಿದ್ದರು. ಮೊಹಮ್ಮದ್ ಅಜರುದ್ದೀನ್, ರಾಜೀವ್ ಶುಕ್ಲಾ ಸೇರಿ ಪಕ್ಷದ ಪ್ರಮುಖ ನಾಯಕರು ಮತ್ತು ಜನಪ್ರತಿನಿಧಿಗಳು, ವಿವಿಧ ಮಠಾಧೀಶರು, ಮೌಲ್ವಿಗಳು, ಮತ್ತು ಚರ್ಚ್ಗಳ ಮುಖ್ಯಸ್ಥರು, ಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಿಜೆಪಿಯ ಉಚ್ಛಾಟಿತ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.ಸೋಮಶೇಖರ್ ಕೂಡ ಈ ವೇಳೆ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.
ಪ್ರಮಾಣ ವಚನಕ್ಕೂ ಮುನ್ನ ಶಿವಕುಮಾರ್ ಎಲ್ಲರ ಬಳಿಯೂ ತೆರಳಿ ಅಭಿನಂದಿಸಿದರು.