2026-03-07 08:35:31

dont afraid of vote theft by bjp Speed News Kannada

dont afraid of vote theft by bjp  Speed News Kannada

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯಲ್ಲಿ ಬಿಜೆಪಿಯವರು ಮತ ಕಳವು ಮಾಡುತ್ತಾರೆ ಎಂಬ ಭಯ ಬೇಡ. ಧೈರ್ಯದಿಂದ ಚುನಾವಣೆ ಎದುರಿಸಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮತದಾರರನ್ನು ಓಲೈಸಬೇಕು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದ್ದಾರೆ.

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಗಂಗಾನಗರ ಮತ್ತು ಚಾಮುಂಡಿ ನಗರದಲ್ಲಿ ನಾಗರಿಕರಿಗೆ ಶನಿವಾರ ಉಚಿತ ರೇಷನ್ ಕಿಟ್ ವಿತರಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 17 ನೇ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವುದರ ಜೊತೆಗೆ  ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಪ್ರಕಟಿಸಿದ್ದು, ಹೆಚ್ಚಿನ ಅನುದಾನವನ್ನೂ ಮೀಸಲಿಟ್ಟಿರುವುದು ಹೆಮ್ಮೆಯ ಸಂಗತಿ ಎಂದರು.

ಬೆಂಗಳೂರು ನಗರದಲ್ಲಿ 2,250 ಕೋಟಿ ರೂರು. ವೆಚ್ಚದಲ್ಲಿ ಹೆಬ್ಬಾಳ ಜಂಕ್ಷನ್‌ ನಿಂದ ಮೇಖ್ರಿ ವೃತ್ತದವರೆಗೆ ಸುರಂಗ ಮಾರ್ಗ ಹಾಗೂ ಮೇಲು ಸೇತುವೆ ನಿರ್ಮಾಣ, ನಗರದೊಳಗೆ ವಾಹನ ದಟ್ಟಣೆ ಕಡಿಮೆ ಮಾಡಲು ನೆಲಮಂಗಲ-ತಾವರೆಕೆರೆ-ಬಿಡದಿ ಮಧ್ಯಂತರ ವರ್ತುಲ ರಸ್ತೆ ನಿರ್ಮಾಣ, 73 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಭಾಗ-1ರ ಅನುಷ್ಠಾನ ಹಾಗೂ 2027ರ ಅಂತ್ಯದೊಳಗೆ ಪರಿಷ್ಕೃತ ಮಾಸ್ಟರ್ ಪ್ಲಾನ್-2041 ಜಾರಿಗೊಳಿಸಲು ಬಜೆಟ್ ನಲ್ಲಿ ನಿರ್ಧರಿಸಲಾಗಿದೆ. ಒಟ್ಟಾರೆ ಬೆಂಗಳೂರು ನಗರಕ್ಕೆ 7 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಟ್ಟಿರುವುದು ಬೆಂಗಳೂರಿನ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.

ಕೇಂದ್ರದ ಬಿಜೆಪಿ ಸರ್ಕಾರ ಮತ ಪರಿಷ್ಕರಣೆ ಮಾಡಲು ಮುಂದಾಗಿದೆ. ಆದರೆ, ಕೇವಲ ಅಲ್ಪಸಂಖ್ಯಾತರ ಹೆಸರುಗಳನ್ನು ಮತ ಪಟ್ಟಿಯಿಂದ ತೆಗೆದು ಹಾಕುವ ಹುನ್ನಾರ ಇದರ ಹಿಂದೆ ಅಡಗಿದೆ ಎಂದು ಆರೋಪಿಸಿದ ಸಚಿವರು, ಬಿಜೆಪಿ ನಡೆಸುತ್ತಿರುವ ಈ ಹುನ್ನಾರಕ್ಕೆ ಯಶಸ್ಸು ಸಿಗುವುದಿಲ್ಲ. ಹೀಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸುವ ನಿಟ್ಟಿನಲ್ಲಿ ಮುನ್ನಡಿ ಇಟ್ಟಿದೆ. ನಮಗೆ ರಂಜಾನ್, ಯುಗಾದಿ, ಕ್ರಿಸ್ಮಸ್ ಎಲ್ಲವೂ ಒಂದೇ. ಎಲ್ಲಾ ಧರ್ಮದವರೂ ನಮ್ಮ ಅಣ್ಣ ತಮ್ಮಂದಿರು ಇದ್ದಂತೆ. ಎಲ್ಲರೂ ಸಹಬಾಳ್ವೆಯಿಂದ ಜೀವನ ನಡೆಸುವುದು ಅತ್ಯಗತ್ಯ ಎಂದು ಬೈರತಿ ಸುರೇಶ್ ಕರೆ ನೀಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.