ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಪ್ರಿಲ್-ಮೇ ತಿಂಗಳ ಮಧ್ಯಭಾಗದಲ್ಲಿ ನಡೆಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ. ಈ ಸಂಬಂಧ ಆಯೋಗವು ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ. ಕಳೆದ ಐದು ವರ್ಷಗಳಿಂದ ಒಂದಲ್ಲ ಒಂದು ಕಾರಣಗಳನ್ನು ಮುಂದೊಡ್ಡಿ ಎಲ್ಲ ಪಕ್ಷಗಳ ಸರ್ಕಾರಗಳೂ ಜಿಬಿಎ ಚುನಾವನೆಯನ್ನು ಮುಂದೂಡುತ್ತಾ ಬಂದಿದ್ದವು. ಜೂನ್ 30ರ ಒಳಗೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಏಕಕಾಲಕ್ಕೆ ಒಂದೇ ಹಂತದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಸೇರಿದಂತೆ ಎಲ್ಲಾ ಹಂತದ ಪರೀಕ್ಷೆಗಳು ಮಾರ್ಚ್- ಏಪ್ರಿಲ್ ಅಂತ್ಯದೊಳಗೆ ಮುಗಿಯಲಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಪ್ರಿಲ್- ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಸಲು ಆಯೋಗ ನಿರ್ಧರಿಸಿದೆ. ಜಿಬಿಎ ಚುನಾವಣೆ ಜೊತೆಗೆ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಏಕಕಾಲಕ್ಕೆ ಒಂದೇ ಹಂತದಲ್ಲಿ ನಡೆಯಲಿವೆ.
5,948 ಗ್ರಾ.ಪಂ.ಗಳ ಪೈಕಿ 5,698 ಗ್ರಾ.ಪಂ.ಗಳಿಗೆ 2020 ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿದ್ದೇ ಕೊನೆ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ 2021-22ರಲ್ಲಿ ನಡೆದಿತ್ತು. 2026ರ ಫೆಬ್ರವರಿ ಎರಡನೇ ವಾರಕ್ಕೆ ಪಂಚಾಯಿತಿ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿದೆ. ಇದರ ಜತೆ 2026ರ ಮಾರ್ಚ್‌ಗೆ ಮುಗಿಯುವ 92 ಗ್ರಾ.ಪಂ.ಗಳನ್ನೂ ಸೇರಿಸಿ ಚುನಾವಣೆ ನಡೆಸಲು ಆಯೋಗ ತಯಾರಿ ನಡೆಸಿದೆ.
ಈ ಬಾರಿಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂಗಳಿಗೆ ಬದಲಾಗಿ ಮತಪತ್ರಗಳನ್ನು ಬಳಸಲು ಸರ್ಕಾರ ತೀರ್ಮಾನಿಸಿದೆ. ಇದುವರೆಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಮಾತ್ರ ಮತಪತ್ರಗಳನ್ನು ಬಳಸಲಾತ್ತಿತ್ತು. ಉಳಿದಂತೆ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಇವಿಎಂ ಬಳಸಲಾಗುತ್ತಿತ್ತು.