2026-03-07 01:16:59

Empowerment of government schools is the governments priority | ಸರ್ಕಾರಿ ಶಾಲೆಗಳ ಸಬಲೀಕರಣವೇ ಸರ್ಕಾರದ ಆದ್ಯತೆ ಸಚಿವ ಮಧು ಬಂಗಾರಪ್ಪ | Speed News Kannada

Empowerment of government schools is the governments priority | ಸರ್ಕಾರಿ ಶಾಲೆಗಳ ಸಬಲೀಕರಣವೇ ಸರ್ಕಾರದ ಆದ್ಯತೆ ಸಚಿವ ಮಧು ಬಂಗಾರಪ್ಪ | Speed News Kannada

ಬೆಂಗಳೂರು: "ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 55ನೇ ಸುವರ್ಣ ಸಂಭ್ರಮ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ಕಳೆದ ಎರಡು ವರ್ಷಗಳಲ್ಲಿ ಸುಮಾರು 14,499 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಉತ್ತರ ಕರ್ನಾಟಕ ಭಾಗದ ಶಿಕ್ಷಕರು ಎದುರಿಸುತ್ತಿದ್ದ ವರ್ಗಾವಣೆ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಶಿಕ್ಷಕ ಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ 46,000 ಸರ್ಕಾರಿ ಶಾಲೆಗಳಲ್ಲಿ ಏಕಕಾಲಕ್ಕೆ ಪೋಷಕರ ಸಭೆಯನ್ನು ನಡೆಸುವ ಮೂಲಕ ಶಾಲಾ ಅಭಿವೃದ್ಧಿಯಲ್ಲಿ ಸಮುದಾಯದ ಸಹಭಾಗಿತ್ವವನ್ನು ಹೆಚ್ಚಿಸಲಾಗಿದೆ ಎಂದರು.
ಮಕ್ಕಳಿಗೆ ಮೊಟ್ಟೆ, ಹಾಲು, ಶೂ-ಸಾಕ್ಸ್ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಯೋಜನೆಗಳನ್ನು ಚುರುಕುಗೊಳಿಸಲಾಗಿದೆ. ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಶೇ. 20 ರಷ್ಟು ಹೆಚ್ಚಿಸುವ ಗುರಿಯನ್ನು ಶಿಕ್ಷಕರು ಹೊಂದಬೇಕು. ಮಕ್ಕಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದು ದೇಶದಲ್ಲೇ ಮಾದರಿ ಯೋಜನೆಯಾಗಿದೆ ಎಂದು ತಿಳಿಸಿದರು.
ಗೌರವ ಸಮರ್ಪಣೆ:
ಇದೇ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ಶಿಕ್ಷಣ ರಾಮಯ್ಯ', ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 'ಸಂಘ ಮಿತ್ರ' ಸಚಿವ ಮಧು ಬಂಗಾರಪ್ಪ ಅವರಿಗೆ 'ಗುರುಕುಲ' ಮತ್ತು ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರಿಗೆ 'ಶಿಕ್ಷಕ ಸೈನಿಕ' ಬಿರುದು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಎಐಪಿಟಿಎಫ್ ರಾಷ್ಟ್ರಾಧ್ಯಕ್ಷ ಬಸವರಾಜ ಗುರಿಕಾರ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಸೇರಿದಂತೆ ಸಾವಿರಾರು ಶಿಕ್ಷಕರು ಭಾಗವಹಿಸಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.