ನೆಲಮಂಗಲದ ಸಮೀಪವಿರುವ ಜಿಯೋ ಮಾರ್ಟ್ ಗೋಡೌನ್‌ನಲ್ಲಿ ಆಕಸ್ಮಿಕವಾಗಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಂದಾಜು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಹರಡಿಕೊಂಡಿದ್ದ ಈ ಬೃಹತ್ ಕಟ್ಟಡವು ಬೆಂಕಿಯ ತೀವ್ರತೆಗೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ರಾತ್ರಿ ಸುಮಾರು 10 ಗಂಟೆಯ ಹೊತ್ತಿಗೆ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಈ ದುರಂತಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.
ಬೆಂಕಿಯ ಅಬ್ಬರ ಎಷ್ಟಿತ್ತೆಂದರೆ ಇಡೀ ನೆಲಮಂಗಲ ಹೆದ್ದಾರಿಯು ದಟ್ಟವಾದ ಹೊಗೆಯಿಂದ ಆವೃತವಾಗಿತ್ತು, ಇದು ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಾಚರಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿತು. ಹೊಗೆಯ ಕಾರಣ ಗೋಡೌನ್ ಒಳಗೆ ಪ್ರವೇಶಿಸಲು ಸಾಧ್ಯವಾಗದಿದ್ದಾಗ, ಜೆಸಿಬಿ ಯಂತ್ರಗಳನ್ನು ಬಳಸಿ ಗೋಡೆಗಳನ್ನು ಕೆಡವಿ ಬೆಂಕಿ ನಂದಿಸುವ ಮಾರ್ಗವನ್ನು ಕಂಡುಕೊಳ್ಳಲಾಯಿತು. ಸುಮಾರು 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಸಿಬ್ಬಂದಿ ರಾತ್ರಿಪೂರ್ತಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಗೋಡೌನ್ ಪದ್ಮರಾಜ್ ಎಂಬುವವರಿಗೆ ಸೇರಿದ ಜಾಗದಲ್ಲಿದ್ದು, ಸುಮಾರು 18 ವರ್ಷಗಳ ಹಿಂದೆ 20 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಾಣ ಮಾಡಲಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಇದನ್ನು ಜಿಯೋ ಮಾರ್ಟ್ ಸಂಸ್ಥೆಗೆ ಬಾಡಿಗೆಗೆ ನೀಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.