ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜಕೀಯ ಚಾಣಕ್ಯ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅವರಿಗೆ 71 ವರ್ಷ ವಯಸ್ಸಾಗಿತ್ತು. ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ 1.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ಸುಭ್ರಂಶು ರಾಯ್ ತಿಳಿಸಿದ್ದಾರೆ. ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಯ್ ಅವರು, ಕೋಮಾ ಸ್ಥಿತಿಗೆ ತಲುಪಿದ್ದರು.
ನಾಲ್ಕು ದಶಕಗಳ ರಾಜಕೀಯ ಅನುಭವ ಹೊಂದಿದ್ದ ಮುಕುಲ್ ರಾಯ್ ಅವರು ಪಶ್ಚಿಮ ಬಂಗಾಳದಿಂದ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್, ಟಿಎಂಸಿ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು.
1998ರಲ್ಲಿ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಟಿಎಂಸಿ ಸ್ಥಾಪಿಸಿದಾಗ ರಾಯ್ ಅವರ ಜತೆ ಇದ್ದರು. 2006, 2009ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಯ್, ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದರು.
ಶಾರದಾ ಚಿಟ್ ಫಂಡ್ ಸೇರಿದಂತೆ ಹಲವು ಪ್ರಕರಣಗಳಲ್ಲಿ ರಾಯ್ ಹೆಸರು ತಳುಕು ಹಾಕಿಕೊಂಡಿತ್ತು. 2017ರ ಹೊತ್ತಿಗೆ ರಾಯ್ ಹಾಗೂ ಮಮತಾ ಅವರ ನಡುವಿನ ಸಂಬಂಧ ಹದಗೆಟ್ಟಿತ್ತು. ನಂತರ ಅವರು ಟಿಎಂಸಿ ತೊರೆದು ಬಿಜೆಪಿಗೆ ಸೇರಿದ್ದರು. ಬಂಗಾಳದಲ್ಲಿ ಬಿಜೆಪಿ ಪಕ್ಷದ ಸಂಘಟನೆ ಬಲಪಡಿಸುವ ಜವಾಬ್ದಾರಿ ವಹಿಸಿಕೊಂಡಿದ್ದ ರಾಯ್, ಹಲವು ಟಿಎಂಸಿ ನಾಯಕರನ್ನು ಸೆಳೆದಿದ್ದರು. ಇದರಿಂದಾಗಿ 2019ರ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಾಗಿತ್ತು.
2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣನಗರ ಉತ್ತರ ಕ್ಷೇತ್ರದಿಂದ ಸ್ಫರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಕೆಲವೇ ವು ತಿಂಗಳಲ್ಲಿ ಅವರು ಟಿಎಂಸಿಗೆ ಮರಳಿದ್ದರು. ಬಿಜೆಪಿ ಪಕ್ಷದಿಂದ ಆಯ್ಕೆಯಾದ ನಂತರ ಪಕ್ಷ ಬದಲಾಯಿಸಿದ್ದಕ್ಕಾಗಿ ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಆರೋಗ್ಯ ಕ್ಷೀಣಿಸುತ್ತಿದ್ದಂತೆ, ಸಕ್ರಿಯ ರಾಜಕೀಯದಿಂದ ಮುಕುಲ್ ರಾಯ ಹಿಂದೆ ಸರಿದಿದ್ದರು.
ರಾಯ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಸಂತಾಪ ಸೂಚಿಸಿದ್ದಾರೆ.