ಬೆಂಗಳೂರು: ರಾಜ್ಯದ ಕೆಲವು ಭಾಗಗಳಲ್ಲಿ ಇಂದಿನಿಂದ ಮಳೆ ಆರಮಭವಾಗುವ ಸಾಧ್ಯತೆಗಳಿವೆ. ಬೆಂಗಳೂರು ನಗರದಲ್ಲಿಯೂ ಮುಂದಿನ ಒಂದು ವಾರ ಪ್ರತಿದಿನ ಸಂಜೆಯ ನಂತರ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾದ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎರಡು ದಿನದಿಂದ ನಗರದ ಹಲವು ಕಡೆ ಮೋಡ ಕವಿದ ವಾತಾವರಣವಿದ್ದು, ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತ ನಗರದಲ್ಲಿ ಗರಿಷ್ಠ ತಾಪಮಾನ 34°C ಮತ್ತು ಕನಿಷ್ಠ ತಾಪಮಾನ 22°C ಇರಲಿದ್ದು, ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ ಮತ್ತು ರಾಮನಗರದಲ್ಲಿ ಬಿರುಸಿನ ಮಳೆಯಾಗಲಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ, ರಾಜ್ಯದ ಬಹುಪಾಲು ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಂಗಳೂರು, ಉಡುಪಿ ಮತ್ತು ಕಾರವಾರ ಭಾಗಗಳಲ್ಲಿ ಉಷ್ಣಾಂಶ ಮತ್ತು ಆರ್ದ್ರತೆ ಹೆಚ್ಚಿರಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗಬಹುದು. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಮಲೆನಾಡು, ಕರಾವಳಿ ಜಿಲ್ಲೆಗಳು, ಮಧ್ಯ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಮುನ್ನೆಚ್ಚರಿಕೆ ಮುಂದುವರಿದಿದೆ. ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಮತ್ತು ಬಿರುಗಾಳಿ ಮುಂದುವರಿಯಲಿದೆ. ಮೇ 15ರ ಸುಮಾರಿಗೆ ನೈರುತ್ಯ ಮುಂಗಾರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನ ತಲುಪಲಿದೆ. ಬಳಿಕ ಕೇರಳಕ್ಕೆ ಮುಂಗಾರು ಆಗಮಿಸಲಿದ್ದು, ನಂತರ ರಾಜ್ಯವನ್ನು ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರಿನ ನಿರೀಕ್ಷಿಸಲಾಗಿದೆ.