ಬೆಂಗಳೂರು: ಸರ್ಕಾರಿ ಉದ್ಯೋಗಗಳಿಗೆ ನನೇಮಕಾತಿ ಮಾಡಿಕೊಳ್ಳಬೇಕು ಎಂದು ಉದ್ಯೋಗಾಕಾಂಕ್ಷಿಗಳು ನಡೆಸಿದ ಹೋರಾಟಕ್ಕೆ ಸರ್ಕಾರ ಕೊನೆಗೂ ಮಣಿದಿದೆ. ನಿನ್ನೆ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ 56,432 ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದೆ.
ಮುಂದಿನ 30 ದಿನದೊಳಗೆ ನೇರ ನೇಮಕಾತಿ ಪ್ರಕ್ರಿಯೆಯಡಿ 56,432 ಹುದ್ದೆಗಳನ್ನು ಭರ್ತಿ ಮಾಡಲು ನಿಧರಿಸಿದೆ. ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ.
ಆದರೆ, ಶೇ 50ರಷ್ಟು ಮೀಸಲಾತಿಯ ಮಿತಿಗೊಳಪಟ್ಟು ಎಲ್ಲ ನೇಮಕಾತಿ ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದಾಗಿ, ಎಲ್ಲ ನೇಮಕಾತಿ ಪ್ರಕ್ರಿಯೆಗಳಿಗೂ ತಡೆ ಬಿದ್ದಿತ್ತು.
ಕಾನೂನು ಬಲ ನೀಡುವ ಉದ್ದೇಶದಿಂದ ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪ-ವರ್ಗೀಕರಣ) ಮಸೂದೆ– 2025’ ಅನ್ನು ರಾಜ್ಯ ಸರ್ಕಾರ ರೂಪಿಸಿತ್ತು. ಬೆಳಗಾವಿಯಲ್ಲಿ ಈಚೆಗೆ ನಡೆದ ಅಧಿವೇಶನದಲ್ಲಿ ಅನುಮೋದನೆಗೊಂಡಿದ್ದ ಈ ಮಸೂದೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗುರುವಾರ ಅನುಮೋದನೆ ನೀಡಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ ಅವರು, ‘ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿರುವ ವಿಷಯವು ನ್ಯಾಯಾಲಯದಲ್ಲಿರುವ ಕುರಿತು ಸುದೀರ್ಘ ಚರ್ಚೆ ನಡೆಯಿತು. ಮೀಸಲು ಪ್ರಮಾಣ ಹೆಚ್ಚಿಸಿರುವುದಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳು ಕೋರ್ಟ್ ಮುಂದಿವೆ. 2025ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದಾಗಿ, ಸುಮಾರು 56,432 ಹುದ್ದೆಗಳ ನೇಮಕ ಸ್ಥಗಿತವಾಗಿದೆ’ ಎಂದರು.
2022ರ ಡಿಸೆಂಬರ್ 28ರ ಆದೇಶದ ಪೂರ್ವದಲ್ಲಿ ಜಾರಿಯಲ್ಲಿದ್ದ ಮೀಸಲಾತಿ, ರೋಸ್ಟರ್ ಬಿಂದುಗಳ ಅನ್ವಯ ಹೊಸ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು. ಒಟ್ಟು ಮೀಸಲಾತಿ ಪ್ರಮಾಣ ಅಂದು ಜಾರಿಯಲ್ಲಿದ್ದಂತೆ ಶೇ. 50ಕ್ಕೆ ಸೀಮಿತವಾಗಿದ್ದು, ಅದರ ಅನ್ವಯವೇ ನೇಮಕಾತಿ ಮಾಡಲಾಗುತ್ತದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.