ಬೆಂಗಳೂರು: ಎಲ್ಲಿಯ ಆರೋಗ್ಯ ಇಲಾಖೆ? ಎಲ್ಲಿಯ ಅಬಕಾರಿ ಇಲಾಖೆ? ಈ ಎರಡೂ ಇಲಾಖೆಗಳು ಪರಸ್ಪರ ವಿರುದ್ಧ ದಿಕ್ಕಿನಲಿರುವ ಇಲಾಖೆಗಳು. ಆದರೆ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗೆ ಅಬಕಾರಿ ಇಲಾಖೆಯ ಡಿಸಿ ಭಾಗ್ಯ ಲಭಿಸಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿದ್ದ ಡಾ. ಮೋಹನ್ ಅವರಿಗೆ ಮೈಸೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಡಿಸಿ ಸ್ಥಾನ ನೀಡಲಾಗಿದೆ.
ಮೋಹನ್ ಅವರು ಸಚಿವ ಚಲುವರಾಯಸ್ವಾಮಿ ಅವರ ಸಂಬಂಧಿ ಎಂದು ತಿಳಿದು ಬಂದಿದೆ.
ಈ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ಮುಖಂಡ ಶಾಸಕ ಸುನಿಲ್ ಕುಮಾರ್ ಅವರು, ಚಲುವರಾಯಸ್ವಾಮಿ ಅಣ್ಣನ ಮಗ ಮೋಹನ್ ಗೆ ಅಬಕಾರಿ ಉಪ ಆಯುಕ್ತರ ಹುದ್ದೆ. ಸಚಿವ ಚಲುವರಾಯಸ್ವಾಮಿ ಒತ್ತಡಕ್ಕೆ ಮಣಿದು ನಿಯಮ ಬಾಹಿರ ವರ್ಗಾವಣೆ.
ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ.