2026-06-08 03:53:30

Heavy rain | ರಾಜ್ಯದ ಹಲವೆಡೆ ಐದು ದಿನ ಭಾರೀ ಮಳೆ ಸಾಧ್ಯತೆ | Speed News Kannada

Heavy rain | ರಾಜ್ಯದ ಹಲವೆಡೆ ಐದು ದಿನ ಭಾರೀ ಮಳೆ ಸಾಧ್ಯತೆ | Speed News Kannada

ಬೆಂಗಳೂರು, ಏ.21- ರಾಜ್ಯದಾದ್ಯಂತ ಉರಿ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು ಜನಜೀವನ ಕಷ್ಟಕರವಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 21ರಿಂದ 24ರವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲೂ ಏ.24ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು ಈ ಭಾಗಗಳಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಲೋಮೀಟರ್ ಇರಬಹುದು ಎಂದು ಅಂದಾಜಿಸಲಾಗಿದೆ. ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯಿದ್ದು, ಮಳೆ ಮತ್ತು ಗುಡುಗು ಸಮಯದಲ್ಲಿ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.
ಮರಗಳ ಕೆಳಗೆ ನಿಲ್ಲಬಾರದು, ಬಯಲು ಪ್ರದೇಶಗಳಲ್ಲಿ ಆಶ್ರಯ ಪಡೆಯಬಾರದು ಎಂದು ಎಚ್ಚರಿಸಲಾಗಿದೆ. ಬಿರುಗಾಳಿಯ ಸಮಯದಲ್ಲಿ ಹಳೆಯ ಕಟ್ಟಡಗಳು ಅಥವಾ ದುರ್ಬಲ ಮರಗಳ ಬಳಿ ವಾಹನಗಳನ್ನು ನಿಲ್ಲಿಸುವುದನ್ನು ತಪ್ಪಿಸುವುದು ಉತ್ತಮ. ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಇರಲಿದೆ ಎಂದು ನಿರೀಕ್ಷಿಸಿದೆ. ಬಹುತೇಕ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ.ಮುಂದಿನ ಜೂನ್‌ವರೆಗೆ ಉತ್ತರ ಮತ್ತು ಪೂರ್ವ ಭಾರತ, ಮಧ್ಯಭಾರತದ ಬಹುತೇಕ ಭಾಗಗಳು ಮತ್ತು ವಾಯವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಪಟ್ಟು ಬಿಸಿಗಾಳಿ ಇರುವ ಸಾಧ್ಯತೆಯಿದೆ.
ಬಹುತೇಕ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನಕ್ಕೆ ಸಾಕ್ಷಿಯಾಗಬಹುದು. ಆದಾಗ್ಯೂ ದಕ್ಷಿಣ ಮತ್ತು ವಾಯವ್ಯ ಭಾಗದ ಕೆಲವು ಪ್ರದೇಶಗಳಲ್ಲಿ ಸಾಮಾನ್ಯ ತಾಪಮಾನ ಇರಬಹುದು. ವಾಯವ್ಯ ಮತ್ತು ಈಶಾನ್ಯದ ಕೆಲವು ಸ್ಥಳಗಳನ್ನು ಹೊರತುಪಡಿಸಿ, ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ದೇಶದಲ್ಲಿ ಅತೀವ ಬಿಸಿಲಿನ ಹಿನ್ನೆಲೆಯಲ್ಲಿ ಶೇ.9ರಿಂದ 10ರಷ್ಟು ಗರಿಷ್ಠ ವಿದ್ಯುತ್ ಬೇಡಿಕೆಗೆ ಭಾರತ ಸಿದ್ಧವಾಗಬೇಕು. ಎಂದು ತಜ್ಞರು ಎಚ್ಚರಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.