ಬೆಂಗಳೂರು: ರಾಜ್ಯದ ನದಿ ಪಾತ್ರಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ.
ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಆಧರಿಸಿ ಜನವರಿ 31ರಂದು ಹೈಕೋರ್ಟ್ ವಿಭಾಗೀಯ ಪೀಠವು ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿತ್ತು. ಇದೊಂದು ಗಂಭೀರ ವಿಷಯವಾಗಿದೆದ್ದು, ವಿಶೇಷ ತನಿಖಾ ತಂಡದ ಮೂಲಕ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತ್ತು.
ಜನವರಿ 27ರಂದು ವಿಧಾನಸಭೆಯಲ್ಲಿ ಉತ್ತರ ನೀಡಿದ್ದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಅಕ್ರಮ ಮರಳು ಗಣಿಗಾರಿಕೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದರು. ಇದನ್ನು ಉಲ್ಲೇಖಿಸಿದ ವಿಭಾಗೀಯ ಪೀಠ, ರಾಜ್ಯದ ಗೃಹ ಸಚಿವರೇ ಮರಳು ಮಾಫಿಯಾಗಳ ವಿರುದ್ಧ ಕ್ರಮ ಕೈಗೊಳ್ಳಲು ಅಸಹಾಯಕತೆಯನ್ನು ವ್ಯಕ್ತಪಡಿಸಿದರೆ, ರಾಜ್ಯದ ಆಡಳಿತದಿಂದ ಈ ಅಕ್ರಮ ಚಟುವಟಿಕೆಯನ್ನು ನಿಯಂತ್ರಿಸುವ ವಿಶ್ವಾಸ ಇಲ್ಲ ಎಂದೂ ಅಭಿಪ್ರಾಯಪಟ್ಟಿತ್ತು.
ಮರಳು ಗಣಿಗಾರಿಕೆಯಲ್ಲಿ ಅನೇಕ ‘ದೊಡ್ಡ ಮೀನುಗಳು’ ಭಾಗಿಯಾಗಿದ್ದು, ಗಣಿಗಾರಿಕೆಯನ್ನು ಕಾನೂನುಬದ್ಧಗೊಳಿಸಲು ದರ್ಕಾರ ಆಸಕ್ತಿ ತೋರಿಸುತ್ತಿಲ್ಲ. ಕೃಷ್ಣಾ ನದಿ ತಟ ಪ್ರದೇಶದಲ್ಲಿ ರಾತ್ರಿ ವೇಳೆ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ವರದಿಗಳು ಪ್ರಕಟವಾಗಿವೆ. ರಾಯಚೂರು ಜಿಲ್ಲೆಯ ಮಹಿಳಾ ಶಾಸಕಿ ಕರೇಮ್ಮ ಜಿ. ನಾಯಕ್ ಅವರು ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಕುರಿತು ಪ್ರಶ್ನೆ ಎತ್ತಿದ ಬಳಿಕ ಮರಳು ಮಾಫಿಯಾದಿಂದ ಜೀವ ಬೆದರಿಕೆ ಬಂದಿದೆ ಎಂದು ಹೇಳಿದ್ದನ್ನೂ ನ್ಯಾಯಪೀಠ ತನ್ನ ಆದೇಶದಲ್ಲಿ ಪ್ರಸ್ತಾಪಿಸಿದೆ.