ಬೆಂಗಳೂರು: ದೂರುದಾರರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಠಾಣಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ನಗರದ ಥಣಿಸಂದ್ರದಲ್ಲಿರುವ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಹಮಿಕೊಂಡಿದ್ದ ಮಾಸಿಕ ಕವಾಯತುವಿನಲ್ಲಿ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯಲ್ಲಿ ಠಾಣೆ ಬಹಳ ಮುಖ್ಯ ಠಾಣೆಯಲ್ಲಿ ಸರಿಯಾಗಿ ಕೆಲಸ ಮಾಡಿದರೆ ಎಲ್ಲವೂ ಸರಿ ಇರುತ್ತದೆ. ಆದರೆ ಠಾಣೆಯಲ್ಲಿ ನಡೆಯುವ ಕಾರ್ಯವೈಖರಿ ಕುರಿತು ಲೋಪದೋಷಗಳು ಕೇಳಿಬರುತ್ತಿವೆ. ದೂರುದಾರರು ಮತ್ತು ಸಾರ್ವಜನಿಕರು ಠಾಣೆಗೆ ಹೋದಾಗ ಸರಿಯಾಗಿ ಸ್ಪಂದಿಸಲಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಠಾಣಾಧಿಕಾರಿಗಳು ಸ್ಪಂದಿಸದಿದ್ದರೆ ಅವರು ಮೇಲಾಧಿಕಾರಿಗಳನ್ನು ಭೇಟಿ ಮಾಡುತ್ತಾರೆ. ಇದು ಆಗಬಾರದು.ಯಾರಾದರೂ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಠಾಣಾಧಿಕಾರಿಗಳ ಮೇಲೆ ಆರೋಪ ಮಾಡಿದರೆ ಸಂಬಂಧಪಟ್ಟ ಠಾಣಾಧಿಕಾರಿ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಈಗಾಗಲೇ ಡಿಸಿಪಿ ಮತ್ತು ಎಸಿಪಿಗಳು ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದ್ದೇನೆ ಎಂದ ಅವರು, ಆಯುಕ್ತರು ತಿಳಿಸಿದರು. 112 ಉತ್ತಮವಾಗಿ ಕೆಲಸ ಮಾಡುತ್ತಿದೆ. ಇದರಿಂದ ನಗರದಲ್ಲಿ ಶೇ.8 ರಿಂದ 10 ರಷ್ಟು ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ನಗರದಲ್ಲಿ ನಡೆದ ಐಪಿಎಲ್ ಪಂದ್ಯಗಳು ಸುರಕ್ಷಿತವಾಗಿ ನಡೆದಿವೆ. ಇದಕ್ಕೆ ಸಾರ್ವಜನಿಕರಿಂದಲೂ ಪ್ರಶಂಸೆ ವ್ಯಕ್ತವಾಗಿವೆ ಎಂದು ತಿಳಿಸಿದರು.