2026-06-25 03:52:28

ಆಕ್ರಮಣಕಾರಿ ನಾಯಿಗಳನ್ನು ಕೊಲ್ಲಬಹುದು: ಸುಪ್ರೀಂಕೋರ್ಟ್‌ ಆದೇಶ|Speed News Kannada

ಆಕ್ರಮಣಕಾರಿ ನಾಯಿಗಳನ್ನು ಕೊಲ್ಲಬಹುದು: ಸುಪ್ರೀಂಕೋರ್ಟ್‌ ಆದೇಶ|Speed News Kannada

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂ ಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ. ಈ ಮೂಲಕ ಹಿಂದಿನ ಆದೇಶವನ್ನು ತಿದ್ದುಪಡಿ ಮಾಡಬೇಕು ಎಂದು ಸಲ್ಲಿಸಲಾದ ಅರ್ಜಿಗಳನ್ನು ಇಂದು ವಜಾಗೊಳಿಸಿದೆ.

ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕು. ಅವುಗಳಿಗೆ ಸಂತಾನಹರಣ ಚಿಕಿತ್ಸೆ ಹಾಗೂ ರೇಬಿಸ್‌ ನಿರೋಧಕ ಔಷಧ ನೀಡಬೇಕು. ಆ ನಾಯಿಗಳನ್ನು ಮತ್ತೆ ಮೊದಲಿದ್ದ ಪ್ರದೇಶಗಳಿಗೆ ಬಿಡಬಾರದು. ಈ ಮೂಲಕ ಬೀದಿನಾಯಿಗಳ ನಿಯಂತ್ರಣಕ್ಕೆ ಸರ್ಕಾರಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ 2025ರ ನವೆಂಬರ್‌ನಲ್ಲಿ ತೀರ್ಪು ನೀಡಿತ್ತು. ಈ ತೀರ್ಪನ್ನು ತಿದ್ದುಪಡಿ ಮಾಡಬೇಕು ಎಂದು ಶ್ವಾನ ಪ್ರಿಯರು ಹಾಗೂ ಸಾಮಾಜಿಕ ಕಾರ್ಯಕ್ರತರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳು ಇರುವುದು ಆತಂಕಕಾರಿ. ಪ್ರಾಣಿಗಳು, ಜನರು, ವಿಶೇಷವಾಗಿ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿದ ಪ್ರಕರಣಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ. ಇದೇ ವೇಳೆ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಹೊರಡಿಸಿದ ಮಾನದಂಡ ಕಾರ್ಯಾಚರಣೆಯನ್ನು ಪ್ರಶ್ನಿಸುವ ಅರ್ಜಿಗಳನ್ನೂ ನ್ಯಾಯಾಲಯ ತಿರಸ್ಕರಿಸಿದೆ.

ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು AWBI ನಿಯಮಗಳನ್ನು ಜಾರಿಗೊಳಿಸಬೇಕು, ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಪ್ರಾಣಿ ಜನನ ನಿಯಂತ್ರಣ ವ್ಯವಸ್ಥೆ ಸ್ಥಾಪಿಸಬೇಕು, ರೇಬೀಸ್ ವಿರೋಧಿ ಲಸಿಕೆಗಳು ಮತ್ತು ಇಮ್ಯುನೊಗ್ಲಾಬ್ಯುಲಿನ್‌ಗಳ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು, ಈ ನಿರ್ದೇಶನಗಳನ್ನು ಕಾರ್ಯಗತಗೊಳಿಸಲು ನಿಯೋಜಿಸಲಾದ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಎಂದು ಕೋರ್ಟ್‌ ನಿರ್ದೇಶನ ನೀಡಿದೆ.

ರೇಬಿಸ್ ಸೋಂಕು ಮತ್ತು ಗಂಭೀರ ರೋಗಗಳಿಂದ ಬಳಲುತ್ತಿರುವ, ಮನುಷ್ಯರಿಗೆ ಅಪಾಯಕಾರಿಯಾದ ನಾಯಿಗಳನ್ನು ಕೊಲ್ಲುವುದಕ್ಕೆ ಅಧಿಕಾರಿಗಳಿಗೆ‌ ಕೋರ್ಟ್ ಅನುಮತಿ ನೀಡಿದೆ. ಅಂತಹ ಅಧಿಕಾರಿಗಳ ವಿರುದ್ಧ ಯಾವುದೇ FIR, ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.‌ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬೀದಿ ನಾಯಿಗಳ ಸಂಖ್ಯೆ ನಿಯಂತ್ರಿಸಲು ವ್ಯವಸ್ಥಿತ ಪ್ರಯತ್ನ ಮಾಡಬೇಕು ಎಂದು ಸೂಚಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.