ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಗುಡ್‌ನ್ಯೂಸ್ ಕೊಟ್ಟಿದೆ. 72 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಶೇ.2 ರಷ್ಟು ಕ್ರೀಡಾ ಮೀಸಲಾತಿ ಪ್ರಕಾರ 2 ಸಾವಿರ ಹುದ್ದೆಗಳು ಕ್ರೀಡಾಪಟುಗಳಿಗೆ ಲಭ್ಯವಾಗಲಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಮಾಜದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಒಟ್ಟು ಜನಸಂಖ್ಯೆಯಲ್ಲಿ ಶೇ.65ರಷ್ಟು ಜನರು 35 ವರ್ಷಕ್ಕಿಂತ ಕಡಿಮೆ ವಯೋಮಿತಿಯವರಿದ್ದಾರೆ. ಅವರನ್ನು ರಾಜ್ಯದ ಮತ್ತು ರಾಷ್ಟ್ರದ ಅಭಿವೃದ್ಧಿಗೆ ತೊಡಗಿಸಿಕೊಳ್ಳಬೇಕು. ಪದವಿ ಪಡೆಯುವುದರೊಳಗೆ ಮತದಾರರ ಹಕ್ಕು ಪಡೆಯುವ ಅವರಿಂದ ಸಮಾಜದ ಅಭಿವೃದ್ಧಿಗೆ ಉಪಕಾರಿಯಾಗುವಂತಹ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನಮ್ಮ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ನೃಪತುಂಗ ರಸ್ತೆಯ ಯವನಿಕಾ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ಶೇ. 15 ರಷ್ಟು ವಿನಾಯಿತಿ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಹಾಜರಾತಿ ವಿನಾಯಿತಿ ನೀಡಲಾಗುವುದು. ಇದನ್ನು ಕೂಡಲೇ ಅನುಷ್ಟಾನಗೊಳಿಸಲಾಗಿದ್ದು, ಸರ್ಕಾರಿ ಆದೇಶ ಹೊರಡಿಸಿರುವುದಾಗಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿ ಶೇ. 50ರಷ್ಟು ಇದ್ದರೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಾರೆ. ಅಂಥವರಿಗೆ ಹಾಜರಾತಿ ಬಂದಿರುವುದಿಲ್ಲ. ಯಾವುದೇ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಬಾರದು. ಈ ಉದ್ದೇಶದಿಂದ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ಅವಕಾಶ ಕಲ್ಪಿಸಲಾಗಿದೆ. ಒಟ್ಟು 34 ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಹಾಜರಾತಿ ವಿನಾಯಿತಿ ನೀಡಲಾಗಿದ್ದು, ಕ್ರೀಡಾಕೂಟಗಳ ಪಟ್ಟಿಯನ್ನೂ ಸಹ ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ಸರ್ಕಾರವು ರಾಜ್ಯದ ಸಾಧಕ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ ನೀಡಲು ಹೆಚ್ಚಿನ ಆದ್ಯತೆ ನೀಡುತ್ತಿದೆ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ 72 ಸಾವಿರ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಶೇ.2 ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಮತ್ತು ಕ್ರೀಡಾಪಟುಗಳ ಆಕ್ಷೇಪಣೆ ಮತ್ತು ಸಲಹೆಗಳನ್ನು ಪರಿಶೀಲಿಸಿ, ಶೀಘ್ರ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದರು. ಮುಂದುವರೆದು ಮಾತನಾಡಿ, 72 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಶೇ.2 ರಷ್ಟು ಕ್ರೀಡಾ ಮೀಸಲಾತಿ ಪ್ರಕಾರ 2 ಸಾವಿರ ಹುದ್ದೆಗಳು ಕ್ರೀಡಾಪಟುಗಳಿಗೆ ಲಭ್ಯವಾಗಲಿದೆ. ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ 'ಎ' ಮತ್ತು 'ಬಿ' ಗುಂಪಿನ ಹುದ್ದೆಗಳನ್ನು ವಿಶೇಷ ನೇಮಕಾತಿಯಡಿ ಭರ್ತಿ ಮಾಡುತ್ತಿದೆ. ಈಗಾಗಲೇ 13 ಕ್ರೀಡಾಪಟುಗಳಿಗೆ ಆದೇಶ ಪತ್ರಗಳನ್ನು ನೀಡಿದ್ದು, 11 ಜನ ವರದಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಕಾಮನ್‌ವೆಲ್ತ್ ಗೇಮ್ಸ್, ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ರೂ. 5 ಲಕ್ಷ ವಿಶೇಷ ಪ್ರೋತ್ಸಾಹಧನ ನೀಡಲಾಗುವುದು. ಈ ಮೊತ್ತವು ಪದಕ ವಿಜೇತರಿಗೆ ನೀಡಲಾಗುವ ನಗದು ಪುರಸ್ಕಾರ ಮೊತ್ತಕ್ಕೆ ಹೆಚ್ಚುವರಿಯಾಗಿದೆ. ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ ತರಬೇತುದಾರರ ಹುದ್ದೆಯ ಭರ್ತಿಗೆ ಆರ್ಥಿಕ ಇಲಾಖೆಯು ಅನುಮೋದನೆ ನೀಡಿದ್ದು, 50 ಖಾಯಂ ತರಬೇತುದಾರರ ಹುದ್ದೆಗಳ ಶೀಘ್ರ ನೇಮಕಾತಿಗೆ ಕ್ರಮ ವಹಿಸಲಾಗುವುದು. ಮೊಟ್ಟ ಮೊದಲ ಬಾರಿಗೆ 'ಅಂತಾರಾಷ್ಟ್ರೀಯ ಮಟ್ಟದ ಯುವ ಜನೋತ್ಸವ'ವನ್ನು ಆಯೋಜಿಸಲು ಚಿಂತನೆ ನಡೆಸುತ್ತಿದ್ದೇವೆ. ನಮ್ಮ ಸಂಸ್ಕೃತಿ, ಕ್ರೀಡೆ ಮತ್ತು ಯುವಕರ ವಿಚಾರಧಾರೆಗಳನ್ನು ಅಳವಡಿಸಿ ಹಬ್ಬ ಮಾಡಲಾಗುವುದು. ಡಿಸೆಂಬರ್ ಅಥವಾ ಜನವರಿಯಲ್ಲಿ ಆಯೋಜಿಸಲಾಗುವುದು. ಪ್ರಸಕ್ತ ವರ್ಷದಿಂದ ತಾಲ್ಲೂಕು ಮಟ್ಟದಿಂದಲೇ ಅತ್ಯಂತ ವ್ಯವಸ್ಥಿತವಾಗಿ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
₹36 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಕರ್ನಾಟಕದಲ್ಲಿ 32 ಕಡೆ ₹36 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣಗಳನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಈ ಬಾರಿಯ ಬಜೆಟ್‌ನಲ್ಲೂ ಹಲವು ಕಾರ್ಯಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದ ಅವರು, ಉನ್ನತ ಶಿಕ್ಷಣ ಸಚಿವನಾಗಿದ್ದ ವೇಳೆ ಮೊದಲ ಬಾರಿಗೆ ಸಿಇಟಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗಿತ್ತು. ಈ ವರ್ಷ 115 ವಿದ್ಯಾರ್ಥಿಗಳಿಗೆ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಸೀಟುಗಳು ಸಿಕ್ಕಿದೆ. ನಮ್ಮ ಸರ್ಕಾರ ಕ್ರೀಡಾ ಚಟುವಟಿಕೆಗಳನ್ನು ಉತ್ತೇಜಿಸಲು ದೊಡ್ಡ ಹೆಜ್ಜೆ ಇರಿಸಿದೆ. ಕಂಠೀರವ ಕ್ರೀಡಾಂಗಣವನ್ನು ಪುನರ್ ಅಭಿವೃದ್ಧಿ ಮಾಡಲಾಗುವುದು. ಅಂತಾರಾಷ್ಟ್ರೀಯ ಮಟ್ಟದ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಜೊತೆಗೆ ಕಾಮನ್‌ವೆಲ್ತ್ ಗೇಮ್ಸ್ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳನ್ನು ಆಯೋಜಿಸಲು ಬೇಕಾದ ಮೂಲಸೌಕರ್ಯಗಳನ್ನು ಒದಗಿಸಲಾಗುವುದು. ಕ್ಯಾಬಿನೆಟ್‌ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕಳೆದ ಎರಡು ವರ್ಷದಿಂದ ಏಕಲವ್ಯ, ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಿಲ್ಲ. ಈ ಪ್ರಶಸ್ತಿಗಳನ್ನು ಆಗಸ್ಟ್ 29, ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ ಜನ್ಮದಿನದಂದು ವಿತರಿಸಲಾಗುವುದು ಎಂದೂ ಜಿ. ಪರಮೇಶ್ವರ್ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.