ಬೆಂಗಳೂರು: "ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಲಕ್ಷಾಂತರ ಸರ್ಕಾರಿ ಹುದ್ದೆಗಳನ್ನು ತುಂಬಿ ರಾಜ್ಯದ ಯುವಜನತೆಯ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಿ" ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ನಿರಂತರವಾಗಿ ಧ್ವನಿಯೆತ್ತುತ್ತಾ ಬಂದಿದೆ. ನಮ್ಮ ಪ್ರಣಾಳಿಕೆಯಲ್ಲಿ ಮತ್ತು ರಾಜ್ಯದ ಅಭಿವೃದ್ಧಿಗೆ ನಮ್ಮ ಪಕ್ಷ ಹೊರಡಿಸಿರುವ ನೀಲನಕ್ಷೆಯಲ್ಲಿಯೂ ಈ ಅಂಶವನ್ನು ಮೊದಲೇ ಸೇರಿಸಿದ್ದೇವೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಅಭಿಪ್ರಾಯವನ್ನು ಅವರು ಹಂಚಿಕೊಂಡಿದ್ದಾರೆ.
ಈಗ ಇದೇ ವಿಚಾರವಾಗಿ ಧಾರವಾಡದಲ್ಲಿ ಕಳೆದ ಆರೇಳು ತಿಂಗಳಿನಿಂದ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿರುವ ವಿದ್ಯಾರ್ಥಿ ಸಮೂಹದ ಜೊತೆಗೂ KRS ಪಕ್ಷ ನಿಂತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಳ್ಳು ಹೇಳುವುದನ್ನು ಮತ್ತು ಹಿಂದಿನ ಸರ್ಕಾರಗಳ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು, ರಾಜ್ಯದ ಲಕ್ಷಾಂತರ ನಿರುದ್ಯೋಗಿ ಕನ್ನಡಿಗ ಯುವಜನರ ಕೂಗಿಗೆ ಗೌರವ ನೀಡಿ ನೇಮಕಾತಿಗಳನ್ನು ಈ ಕೂಡಲೇ ಆರಂಭಿಸಬೇಕು ಎಂದು ಆಗ್ರಹಪಡಿಸಿದ್ದಾರೆ.