2026-03-07 07:33:53

Kumaraswamy criticizes | ಕುರ್ಚಿ ತಿಕ್ಕಾಟದಲ್ಲಿ ಯುವಕರತ್ತ ಗಮನ ಹರಿಸಲು ಸರಕಾರಕ್ಕೆ ಟೈಮಿಲ್ಲ ಕುಮಾರಸ್ವಾಮಿ ಟೀಕೆ | Speed News Kannada

Kumaraswamy criticizes | ಕುರ್ಚಿ ತಿಕ್ಕಾಟದಲ್ಲಿ ಯುವಕರತ್ತ ಗಮನ ಹರಿಸಲು ಸರಕಾರಕ್ಕೆ ಟೈಮಿಲ್ಲ ಕುಮಾರಸ್ವಾಮಿ ಟೀಕೆ | Speed News Kannada

ಬೆಂಗಳೂರು: ಧಾರವಾಡದಲ್ಲಿ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿರುವುದನ್ನು ರಾಜ್ಯ ಸರಕಾರ ಲಘುವಾಗಿ ಪರಿಗಣಿಸಬಾರದು. ಸರಕಾರಿ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬದೇ ನಿರ್ಲಕ್ಷಿಸಿದ ಪರಿಣಾಮವೇ ಯುವಜನರು ಪ್ರತಿಭಟನೆ ದಾರಿ ತುಳಿಯಲು ಕಾರಣ  ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ನಿಮ್ಮ ಪ್ರತಿಭಟನೆ ಶಾಂತಿಯುತವಾಗಿರಲಿ, ನಿಮ್ಮೊಂದಿಗೆ ನಾನಿದ್ದೇನೆ ಎಂದು ಯುವಜನರಿಗೆ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ 2.94 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಬಿದ್ದಿವೆ. ಸಂಪುಟ ದರ್ಜೆ ಹುದ್ದೆಗಳು ಮಾತ್ರ ಸೂಪರ್‌‌ʼಫಾಸ್ಟ್ ಆಗಿ ಭರ್ತಿ ಆಗುತ್ತಿವೆ. ಕಾಂಗ್ರೆಸ್ ಸರಕಾರದ ಆದ್ಯತೆ ಯಾವ ರೀತಿಯಲ್ಲಿದೆ ಎಂಬುದು ಅರ್ಥವಾಗುತ್ತದೆ.
ಆರ್.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಕರ್ನಾಟಕ ಆಡಳಿತ ಸುಧಾರಣೆ ಆಯೋಗದ ವರದಿಯಂತೆ ರಾಜ್ಯದಲ್ಲಿ 7 ಲಕ್ಷ ನಿರುದ್ಯೋಗಿಗಳಿದ್ದಾರೆ. ಇವರೆಲ್ಲರೂ ಸರಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದು, ಖಾಲಿ ಹುದ್ದೆಗಳನ್ನು ಸರಕಾರ ಹಂತ ಹಂತವಾಗಿ ಭರ್ತಿ ಮಾಡಬೇಕಿತ್ತು. ಕುರ್ಚಿ ತಿಕ್ಕಾಟದಲ್ಲಿ ಅಮೂಲ್ಯವಾದ 3 ವರ್ಷಗಳನ್ನು ಪೋಲು ಮಾಡಿದೆ.  ಯುವಜನರತ್ತ ಗಮನ ಹರಿಸಲು ಈ ಸರಕಾರಕ್ಕೆ ಟೈಮಿಲ್ಲ!
ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರಕಾರ ಮರೆಯಬಾರದು. ಈ ಹೊತ್ತಿಗೆ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ಅತಿ ಹೆಚ್ಚು ಹುದ್ದೆಗಳು ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇವೆ. ಬೆಂಗಳೂರು ನಗರದ 18 ಆಯಕಟ್ಟಿನ ಪೊಲೀಸ್‌ ಠಾಣೆಗಳಲ್ಲಿ ಇನ್‌ʼಸ್ಪೆಕ್ಟರ್‌ʼಗಳೇ ಇಲ್ಲ! ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗಿದ್ದರ ಪರಿಣಾಮವಿದು. ಇದೆಲ್ಲವೂ ಆಡಳಿತದ ಮೇಲೆ ನೇರವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಕೂಡಲೇ ಖಾಲಿ ಹುದ್ದೆಗಳ ಭರ್ತಿ ಮಾಡುವ ನಿಟ್ಟಿನಲ್ಲಿ ಸರಕಾರ ತುರ್ತು ಕ್ರಮ ವಹಿಸಬೇಕು. ವಿಧಾನಸೌಧದ 3ನೇ ಮಹಿಡಿಯಿಂದ ಕೆಳಗಿಳಿದು ಬಂದು ಯುವಜನರ ದನಿ ಆಲಿಸಬೇಕು. ಇಲ್ಲವಾದರೆ, ಇವರ ಆಕ್ರೋಶಕ್ಕೆ ಕಾಂಗ್ರೆಸ್‌ ಸರಕಾರ ಬೆಲೆ ತೆರಬೇಕಾಗುತ್ತದೆ‌ ಎಂದು ಎಚ್ಚರಿಕೆ ನೀಡಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.