2026-03-07 06:33:52

lakshmi hebbalkar welcome budget Speed News Kannada

lakshmi hebbalkar welcome budget Speed News Kannada

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆ ಮೂಲಕ ತಾವು ಆರ್ಥಿಕ ತಜ್ಞ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಈ ಬಜೆಟ್ ದೂರದೃಷ್ಟಿಯುಳ್ಳ ಹಾಗೂ ಆರ್ಥಿಕ ಶಿಸ್ತಿನ ಬಜೆಟ್ ಆಗಿದ್ದು, ರಾಜ್ಯದ ಎಲ್ಲಾ ವರ್ಗದ ಜನರು, ಎಲ್ಲಾ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಮೂಲಭೂತ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ರಾಜ್ಯದ ಅಭಿವೃದ್ಧಿಗೆ ಬಲ ನೀಡಲಿದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಕೃಷಿಕರಿಗೆ ಉತ್ತೇಜನ ನೀಡಲಿದೆ. ಪಂಚ ಗ್ಯಾರಂಟಿ ಯೋಜನೆಗಳಿಗೆ ಅಗತ್ಯ ಹಣ ಮೀಸಲಿಟ್ಟು ಯಾವುದೇ ಕಾರಣಕ್ಕೂ ಈ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿರುವುದು ಜನಸಾಮಾನ್ಯರಿಗೆ ಭರವಸೆ ನೀಡಿದೆ ಎಂದು ಹೇಳಿದರು.

 ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂಪಾಯಿ ಸೇರಿದಂತೆ ಮಹಿಳಾ ಪರ ಯೋಜನೆಗಳಿಗೆ ಒಟ್ಟು 94,663 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಮಹಿಳಾ ಸಬಲೀಕರಣದತ್ತ ಸರ್ಕಾರದ ಬದ್ಧತೆಯನ್ನು ತೋರಿಸುತ್ತದೆ. ಅಂಗನವಾಡಿ ಕೇಂದ್ರಗಳ ಸಮಗ್ರ ಅಭಿವೃದ್ಧಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವ ನಿರ್ಧಾರ ಮಹತ್ವದ್ದಾಗಿದೆ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪೌಷ್ಠಿಕ ಆಹಾರ ಒದಗಿಸುವ ಯೋಜನೆ ಪುನಃ ಆರಂಭಿಸುವುದು ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ದೊಡ್ಡ ಸಹಾಯವಾಗಲಿದೆ. ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೋಡಿ ಸಮವಸ್ತ್ರ ನೀಡುವ ನಿರ್ಧಾರವೂ ಶ್ಲಾಘನೀಯ ಎಂದು ಹೇಳಿದರು.

ಮಕ್ಕಳ ಪರ ಯೋಜನೆಗಳಿಗೆ 63,135 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಮಾಜಿ ದೇವದಾಸಿಯರಿಗೆ ನೀಡಲಾಗುತ್ತಿರುವ ಸಹಾಯಧನವನ್ನು 30 ಸಾವಿರ ರೂಪಾಯಿಯಿಂದ 45 ಸಾವಿರ ರೂಪಾಯಿಗೆ ಹೆಚ್ಚಿಸಿರುವುದು ಹಾಗೂ ಅವರ ಮಕ್ಕಳಿಗೆ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡಲು 5 ಕೋಟಿ ರೂಪಾಯಿ ಮೀಸಲಿಟ್ಟಿರುವುದು ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಧಾರವಾಡ ಮತ್ತು ಬೆಂಗಳೂರಿನಲ್ಲಿ 18 ವರ್ಷದೊಳಗಿನ ಮಕ್ಕಳಿಗಾಗಿ ಮಾದಕ ವ್ಯಸನ ಮುಕ್ತಿ ಕೇಂದ್ರಗಳನ್ನು ಆರಂಭಿಸುವ ನಿರ್ಧಾರ ಹಾಗೂ ಜಿಲ್ಲಾ ಮಟ್ಟದಲ್ಲಿ ಶಿಶುಪಾಲನಾ ಕೇಂದ್ರಗಳನ್ನು ಆರಂಭಿಸಲು ಅನುದಾನ ನೀಡಿರುವುದು ಮಕ್ಕಳ ಭವಿಷ್ಯವನ್ನು ರಕ್ಷಿಸುವ ದೃಷ್ಟಿಯಿಂದ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧಿಸುವ ಕ್ರಾಂತಿಕಾರಕ ನಿರ್ಧಾರ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಗಾಗಿ ಮಹತ್ವದ್ದಾಗಿದೆ ಎಂದು ಹೇಳಿದರು.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.