2026-06-08 03:54:17

Minister Bairati Suresh instructs | ಕೋಲಾರ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಾರದು ಸಚಿವ ಬೈರತಿ ಸುರೇಶ್ ಸೂಚನೆ | Speed News Kannada

Minister Bairati Suresh instructs | ಕೋಲಾರ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಾರದು ಸಚಿವ ಬೈರತಿ ಸುರೇಶ್ ಸೂಚನೆ | Speed News Kannada

ಕೋಲಾರ : ಈ ಬೇಸಿಗೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಕಟ್ಟಪ್ಪಣೆ ಮಾಡಿದ್ದಾರೆ. 
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಕುಡಿಯುವ ನೀರಿನ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೇಸಿಗೆ ಆರಂಭವಾಗಿದ್ದು ಜಿಲ್ಲೆಯ ಆರೂ ತಾಲೂಕುಗಳ ತಹಸೀಲ್ದಾರ್ ಗಳು  ಕಡ್ಡಾಯವಾಗಿ ವಾರಕ್ಕೊಮ್ಮೆ ಸಭೆ ನಡೆಸಿ ಕುಡಿಯುವ ನೀರಿನ ಬಗ್ಗೆ ಅವಲೋಕನ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ನೀಡಬೇಕೆಂದು ಆದೇಶಿಸಿದರು.
ಈ ಸಭೆಯಲ್ಲಿ ಪಶು ಸಂಗೋಪನೆ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಸಮನ್ವಯದಿಂದ ಸಮಸ್ಯೆ ಬಗೆಹರಿಸಬೇಕು. ಅಗತ್ಯ ಇರುವ ಕಡೆಗಳಲ್ಲಿ ಹೊಸ ಬೋರ್ ವೆಲ್ ಕೊರೆಸುವುದು, ಹಳೆಯ ಬೋರ್ ವೆಲ್ ಗಳನ್ನು ದುರಸ್ತಿ ಮಾಡುವಂತೆ ಸೂಚನೆ ನೀಡಿದರು.
ತನಿಖೆಗೆ ಆದೇಶ 
ಮಾರ್ಕಂಡೇಯ ಜಲಾಶಯದ ಕಾಮಗಾರಿಯಲ್ಲಿ ಆಗಿರುವ ವ್ಯತ್ಯಯ ಮತ್ತು ಕಾಮಗಾರಿ ಮುಗಿಯದೇ ಗುತ್ತಿಗೆದಾರನಿಗೆ 43  ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿ, ಹೊಸ ಗುತ್ತಿಗೆದಾರರನ್ನು ನೇಮಿಸಿ ಅದಷ್ಟು ಬೇಗ ನಾಗರಿಕರಿಗೆ ನೀರು ಹರಿಸಲು ಸೂಚನೆ ನೀಡಿದರು.
ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡುವಂತೆ ಸಚಿವರು ಸೂಚನೆ ನೀಡಿದರು. ಕೆಜಿಎಫ್ ನಲ್ಲಿ ಬಿಜಿಎಂಎಲ್ ಸಂಸ್ಥೆಯಿಂದ ಬರಬೇಕಿರುವ ತೆರಿಗೆ ವಸೂಲು ಮಾಡುವ ಸಂಬಂಧ ಸಂಸ್ಥೆಗೆ ನೋಟಿಸ್ ನೀಡಲಾಗುತ್ತದೆ ಎಂದರು.
ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ ಭೂಮಿಯಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡುತ್ತಿರುವ ಸಣ್ಣ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕಂದಾಯ ಸೇವೆಗಳ ಸಮರ್ಪಣಾ ಕಾರ್ಯಕ್ರಮ: 
ಮುಂದಿನ ತಿಂಗಳು ಕೋಲಾರದಲ್ಲಿ ಜಿಲ್ಲಾ ಮಟ್ಟದ ಕಂದಾಯ ಸೇವೆಗಳ ಸಮರ್ಪಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೋಡು, ಪೌತಿ ಖಾತೆ ಸೇರಿದಂತೆ ಕಂದಾಯ ಇಲಾಖೆಯ ಎಲ್ಲಾ ದಾಖಲೆಗಳನ್ನು ಸುಮಾರು 50 ಸಾವಿರ ಜನರಿಗೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.