ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ ಮಂಜುನಾಥ್ ಅವರ ಕುಟುಂಬವು ಧರ್ಮಸ್ಥಳಕ್ಕೆ ಪ್ರವಾಸ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
KA-02-MT-2690 ನಂಬರ್‌ನ ಕಾರು ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಪ್ರಿಯಾಂಕ (30) ಮತ್ತು ಅವರ ಒಂದೂವರೆ ವರ್ಷದ ಮಗ ವೈಭವ್ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಮಂಜುನಾಥ್, ಚಂದನ್, ದಿಲೀಪ್ ಮತ್ತು ದೇವರಾಜು ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚನ್ನರಾಯಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.