ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ನೀಟ್ ಎನ್ನುವುದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣವಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ನೀಟ್‌ನಲ್ಲಿ ಗೊಂದಲ, ಅಕ್ರಮಗಳು ನಡೆಯುತ್ತಲೇ ಇವೆ. ಇದಕ್ಕೆ ಕೊನೆಯೇ ಇಲ್ಲದಂತಾಗಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಸಂಬಂಧಪಟ್ಟ ಸಚಿವಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರವೇ ಇದರ ಸಂಪೂರ್ಣ ಹೊಣೆ ಹೊರಬೇಕಾಗಿದೆ. ಇದು ಕೇಂದ್ರ ಸರ್ಕಾರ ಅಮರ್ಥತತೆಗೆ ಸಾಕ್ಷಿಯಾಗಿದೆ. ಇದರಲ್ಲಿ ಭಾಗಿಯಾದವರಿಗೆ ಶಿಕ್ಷೆ ಕೊಡಿಸಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.
ಈಗ ಮತ್ತೊಮ್ಮೆ ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿರುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ವಿದ್ಯಾರ್ಥಿಗಳು, ಕುಟುಂಬದವರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತದೆ. ಮಾನಸಿಕ ಒತ್ತಡವೂ ಹೆಚ್ಚಾಗಲಿದೆ ಎಂದಿದ್ದಾರೆ.
ಪ್ರತಿ ವರ್ಷ ಆಗುತ್ತಿರುವ ಪ್ರಮಾದವನ್ನು ಸರಿ ಮಾಡಲು ಕೇಂದ್ರ ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ ಇದು ನಿಜಕ್ಕೂ ಅಸಮರ್ಥ ಸರ್ಕಾರವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದೆ ಎಂದರೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತಿದೆ ಎಂದೇ ಅರ್ಥ. ಕೇಂದ್ರ ಬಿಜೆಪಿ ಭ್ರಷ್ಟ ಸರ್ಕಾರವಾಗಿದೆ. ಪ್ರಧಾನಿ ಮೋದಿ ಅವರು ಭಾಷಣ ಮಾಡುವುದನ್ನು ಬಿಟ್ಟು ಇಂಥ ಸಮಸ್ಯೆಗಳಿಗೆ ಕೂಡಲೇ ಪರಿಹಾರ ದೊರಕಿಸಿಕೊಡಬೇಕು ಎಂದು ಡಾ. ಪಾಟೀಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿದಾಗ ಇಂಥ ಯಾವುದೇ ಪ್ರಮಾದ ನಡೆದಿಲ್ಲ. ನಮ್ಮ ಪರೀಕ್ಷಾ ಮಾದರಿಯು ಇಡೀ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರ್ಕಾರಕ್ಕೆ, ಪ್ರಧಾನಿಗೆ ಪರೀಕ್ಷೆ ನಡೆಸುವ ಗಂಧ ಗಾಳಿ ಗೊತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಷ ತಪ್ಪುಗಳ ಮೇಲೆ ತಪ್ಪು ಎಸಗುತ್ತಲೇ ಇದೆ. ಇಂಥವರಿಗೆ ಜನರು ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಹೇಳಿದ್ದಾರೆ.
ಕೋಚಿಂಗ್ ಸೆಂಟರ್‌ಗಳ ದಂಧೆ:
ರಾಜಸ್ಥಾನ, ಹರಿಯಾಣದಲ್ಲಿರುವ ಕೋಚಿಂಗ್ ಸೆಂಟರ್‌ಗಳು ಪ್ರಶ್ನೆ ಪತ್ರಿಕೆಯನ್ನು ಸೋರಿಕೆಯನ್ನು ಮಾಡಿಸಿ ತಮ್ಮ ಇಮೇಜ್ ಹೆಚ್ಚಿಸಿಕೊಳ್ಳುತ್ತಿವೆ. ಕೇಂದ್ರ ಸರ್ಕಾರದವರು ಕೂಡ ಇದರಲ್ಲಿ ಪಾಲುದಾರರಾಗಿದ್ದಾರೆ. ಸಂಬಂಧಪಟ್ಟ ಸಚಿವರು ಕೂಡಲೇ ರಾಜೀನಾಮೆ ಕೊಡಬೇಕು. ಅಕ್ರಮದಲ್ಲಿ ತೊಡಗುವ ಇಂಥ ಕೋಚಿಂಗ್ ಸೆಂಟರ್‌ಗಳ ಮೇಲೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಡಾ. ಶರಣಪ್ರಕಾಶ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.