2026-06-08 04:29:38

NEET ಅಕ್ರಮ: ಸಚಿವ ಧರ್ಮೇಂದ್ರ ಪ್ರಧಾನ್ ರನ್ನು ಪಿಎಂ ಮೋದಿ ವಜಾಗೊಳಿಸಲಿ: ಮಧು ಬಂಗಾರಪ್ಪ ಆಗ್ರಹ| Speed News Kannada

NEET ಅಕ್ರಮ: ಸಚಿವ ಧರ್ಮೇಂದ್ರ ಪ್ರಧಾನ್ ರನ್ನು ಪಿಎಂ ಮೋದಿ ವಜಾಗೊಳಿಸಲಿ: ಮಧು ಬಂಗಾರಪ್ಪ ಆಗ್ರಹ| Speed News Kannada

ಶಿವಮೊಗ್ಗ: ನೀಟ್-ಯುಜಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿ 24 ಲಕ್ಷ ವಿದ್ಯಾರ್ಥಿಗಳು ಸಂಕಷ್ಟಕ್ಕೀಡಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಒತ್ತಾಯಿಸಿದ್ದಾರೆ.

ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳು ಕಷ್ಟ ಅನುಭವಿಸಿದ್ದಾರೆ. ಐವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ದುರಂತಗಳ ನೈತಿಕ ಹೊಣೆಯನ್ನು ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದರು.

ಅತಿಥಿ ಶಿಕ್ಷಕರ ನೇಮಕ:

ಈ ವರ್ಷದಲ್ಲಿ ಜೂನ್ ಆರಂಭದಿಂದಲೇ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಒಟ್ಟು 52 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಈ ಹಿಂದೆ ಇದ್ದ ಬಹುತೇಕ ಕೊರತೆಗಳನ್ನು ಈಗ ಸರಿಪಡಿಸಲಾಗಿದೆ. ಶಿಕ್ಷಣದ ಗುಣಮಟ್ಟವೂ ಹೆಚ್ಚಾಗಿದ್ದು, ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವವರ ಸಂಖ್ಯೆ ಶೇ 6.4ರಷ್ಟು ಹೆಚ್ಚಳಗೊಂಡಿರುವುದೇಸುಧಾರಣೆಗೆ ಸಾಕ್ಷಿ ಎಂದು ತಿಳಿಸಿದರು.

ಕೆಪಿಎಸ್ ದೇಶಕ್ಕೆ ಮಾದರಿ:

ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಪರಿಕಲ್ಪನೆ ಈಗ ದೇಶಕ್ಕೆ ಮಾದರಿ ಆಗಿದೆ. ರಾಜ್ಯದ ಮಾದರಿಯನ್ನು ಅಳವಡಿಸಿಕೊಳ್ಳಲು ತೆಲಂಗಾಣ ಸರ್ಕಾರ ಮುಂದಾಗಿದೆ. ಅಲ್ಲಿನ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರಿಗೆ ಬಂದು ಕೆಪಿಎಸ್ ಬಗ್ಗೆ ಅಧ್ಯಯನ ನಡೆಸಿದ್ದಾರೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ 19 ಕೆಪಿಎಸ್ ಶಾಲೆಗಳು ಸೇರಿದಂತೆ ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ನಿರ್ಮಾಣಕ್ಕೆ ಜೂನ್ 1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರತೀ ಶಾಲೆಗೆ ಕನಿಷ್ಟ ರೂ.3.5 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.