2026-07-01 12:06:18

Neha Hiremath murder case | ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ | SNK

Neha Hiremath murder case | ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ | SNK

ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ. ಈ ಹಿಂದೆ ಹುಬ್ಬಳ್ಳಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಫಯಾಜ್‌ನ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.  ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಹಾಗೂ ತನಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಆರೋಪಿ ಹೈಕೋರ್ಟ್ ಧಾರವಾಡ ಪೀಠದ ಮೆಟ್ಟಿಲೇರಿದ್ದನು. ಹೈಕೋರ್ಟ್‌ನಲ್ಲಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, ಪ್ರಕರಣದ ಗಾಂಭೀರ್ಯತೆಯನ್ನು ಪರಿಗಣಿಸಿ ಆರೋಪಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ. ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಪರವಾಗಿ ಹಿರಿಯ ನ್ಯಾಯವಾದಿ ರಾಘವೇಂದ್ರ ಮುತ್ತಗಿ ಅವರು ವಾದ ಮಂಡಿಸಿದರು. ಆರೋಪಿ ಮಾಡಿರುವ ಕೃತ್ಯ ಅತ್ಯಂತ ಕ್ರೂರವಾಗಿದ್ದು, ಆತನಿಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಸಾಕ್ಷ್ಯ ನಾಶಪಡಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಮತ್ತೊಂದೆಡೆ ಕಾಲೇಜು ಆವರಣದಲ್ಲೇ ಸಾರ್ವಜನಿಕವಾಗಿ ನಡೆದಿದ್ದ ಈ ಭೀಕರ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ.
2024ರ ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ 24 ವರ್ಷದ ಎಂಸಿಎ ವಿದ್ಯಾರ್ಥಿನಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಆರೋಪಿ ಫಯಾಜ್ ಅಡ್ಡಗಟ್ಟಿ, ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ನೇಹಾಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿದ್ದ. 10 ಕ್ಕೂ ಹೆಚ್ಚು ಬಾರಿ ಇರಿತಕ್ಕೊಳಗಾದ ನೇಹಾ ಕಾಲೇಜು ಆವರಣದಲ್ಲಿಯೇ ಸಾವನ್ನಪ್ಪಿದ್ದಳು. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಫಯಾಜ್ ನನ್ನು ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.