2026-06-29 12:00:13

NIKHIL KUMARASWAMY | ಪ್ರದೀಪ್ ಈಶ್ವರ್ ಕಾರಿಗೆ ಚಪ್ಪಲಿ ಎಸೆದ ಪ್ರಕರಣ- ಜೆಡಿಎಸ್ ಕಾರ್ಯಕರ್ತನ ಬಂಧನಕ್ಕೆ ನಿಖಿಲ್ ಆಕ್ರೋಶ | SNK

NIKHIL KUMARASWAMY | ಪ್ರದೀಪ್ ಈಶ್ವರ್ ಕಾರಿಗೆ ಚಪ್ಪಲಿ ಎಸೆದ ಪ್ರಕರಣ- ಜೆಡಿಎಸ್ ಕಾರ್ಯಕರ್ತನ ಬಂಧನಕ್ಕೆ ನಿಖಿಲ್ ಆಕ್ರೋಶ | SNK

ಬೆಂಗಳೂರು: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಕಾರ್ಯಕರ್ತನನ್ನು ಬಂಧಿಸಿರುವುದನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ, ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಅಕಿಲ್ ರೆಡ್ಡಿ ಜೀಡಮಾಕಲಹಳ್ಳಿ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ, ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷದ ಕಾರ್ಯಕರ್ತರನ್ನು ಹತ್ತಿಕ್ಕುವ ಪ್ರಯತ್ನವನ್ನು ನಾವು ಎಂದಿಗೂ ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಬಂಧಿತ ಕಾರ್ಯಕರ್ತನಿಗೆ ತಾವು ಸಂಪೂರ್ಣವಾಗಿ ಕಾನೂನು ಬೆಂಬಲ ನೀಡುವುದಾಗಿ ಘೋಷಿಸಿರುವ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ತಮ್ಮ ಪಕ್ಷದ ಕಾರ್ಯಕರ್ತನಿಗೆ ನ್ಯಾಯ ಸಿಗುವವರೆಗೂ ವಿಶ್ರಮಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಜೊತೆಗೆ ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಎದೆಗುಂದಬಾರದು ಎಂದು ಧೈರ್ಯ ತುಂಬಿದ್ದಾರೆ. ಇನ್ನು ಈ ಚಪ್ಪಲಿ ಎಸೆತದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಅಕಿಲ್ ರೆಡ್ಡಿ, ಸುಮಂತ್, ಪ್ರಕಾಶ್ ಹಾಗೂ ಕೃಷ್ಣ ಎಂಬ ನಾಲ್ಕು ಜನರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ನಗರದ ಕನ್ನಡ ಭವನದ ಮುಂದೆ ಶಾಸಕರ ಕಾರಿನತ್ತ ಚಪ್ಪಲಿ ಎಸೆದ ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ನಾಲ್ಕು ಆರೋಪಿಗಳಷ್ಟೇ ಅಲ್ಲದೆ, ಗಲಾಟೆಯಲ್ಲಿ ಭಾಗಿಯಾಗಿದ್ದ ನೂರಕ್ಕೂ ಹೆಚ್ಚು ಜನರ ಮೇಲೆ ಪೊಲೀಸರು ಸ್ವಯಂಪ್ರೇರಿತವಾಗಿ (ಸುಮೋಟೋ) ಮೊಕದ್ದಮೆ ಹೂಡಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.