ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಒಂದು ವಾರ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 24ರಿಂದ 30ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 24ರಂದು ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 25ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.