2026-05-15 08:38:54

price hike; on moral grounds resign immediately; siddaramaiah to pm modi| ಬೆಲೆ ಏರಿಕೆ: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಆಗ್ರಹ|Speed News Kannada

price hike; on moral grounds resign immediately; siddaramaiah to pm modi| ಬೆಲೆ ಏರಿಕೆ: ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಆಗ್ರಹ|Speed News Kannada

ಬೆಂಗಳೂರು: ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆಯ ನೈತಿಕ ಹೊಣೆ ಹೊತ್ತು ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ಮೋದಿ ಸರ್ಕಾರದ ವೈಫಲ್ಯಗಳನ್ನು ಬಿಚ್ಚಿಟ್ಟು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ.

ನರೇಂದ್ರ ಮೋದಿ ಅವರ ಸರ್ಕಾರ ತನ್ನ ಆಡಳಿತ ವೈಫಲ್ಯಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ದರಗಳನ್ನು ತಲಾ 3 ರೂ. ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಇದು ಬೆಲೆ ಏರಿಕೆಯಲ್ಲ, ಭಾರತದ ಸಾಮಾನ್ಯ ಜನರ ದೈನಂದಿನ ಬದುಕಿನ ಮೇಲೆ ನಡೆಸಿದ ನೇರ ದಾಳಿಯಾಗಿದೆ.

ನಾವು ಅಂದುಕೊಂಡಂತೆ ಕೇಂದ್ರ ಸರ್ಕಾರವು ತನ್ನ ವಿದೇಶಾಂಗ ನೀತಿಯ ವೈಫಲ್ಯ, ಕಳಪೆ ಆರ್ಥಿಕ ನಿರ್ವಹಣೆ ಮತ್ತು ಅಜಾಗರೂಕ ಹಣದುಬ್ಬರದ ನಿರ್ವಹಣೆಯ ಪರಿಣಾಮಗಳನ್ನು ಬಲವಂತವಾಗಿ ದೇಶದ ಜನತೆಯ ತಲೆಯ ಮೇಲೆ ಹೇರುತ್ತಿದೆ. ದೇಶದ ಜನತೆಯ ಹಿತಾಸಕ್ತಿಗಳನ್ನು ಕಾಪಾಡುವ ಬದಲು ಅವರಿಂದಲೇ ಹಣ ಕಿತ್ತುಕೊಂಡು ತನ್ನ ವೈಫಲ್ಯದ ನಷ್ಟ ಭರಿಸುತ್ತಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀ. ಒಂದಕ್ಕೆ 106 ರೂ. ದಾಟಿದೆ. ಡೀಸೆಲ್‌ ದರವು 94 ರೂ. ಆಗಿದೆ. ಈ ಏರಿಕೆಯು ಕೇವಲ ಬಂಕ್‌ಗಳಿಗೆ ಸೀಮಿತಗೊಳ್ಳುವುದಿಲ್ಲ. ಇದರೊಂದಿಗೆ ಸಾರಿಗೆ ವೆಚ್ಚ, ತರಕಾರಿ, ಹಣ್ಣು, ಹಾಲು, ಸೇರಿದಂತೆ ಪ್ರತಿಯೊಂದು ದಿನಬಳಕೆ ವಸ್ತುಗಳ ದರ ಏರಿಕೆಯಾಗುತ್ತದೆ. ಇದರಿಂದ ಕಾರ್ಮಿಕರು, ರೈತರು, ಸಣ್ಣ ವ್ಯಾಪಾರಿಗಳು, ಮನೆಯ ಜವಾಬ್ದಾರಿ ಹೊತ್ತ ಮಹಿಳೆಯರು ಹಾಗೂ ಮಧ್ಯಮ ವರ್ಗದವರು  ದೈನಂದಿನ ಬದುಕು ನಡೆಸುವುದು ಮತ್ತಷ್ಟು ದುಸ್ತರವಾಗಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಕಡಿಮೆಯಿದ್ದಾಗ ಅದರ ಲಾಭವನ್ನು ಮೋದಿ ಸರ್ಕಾರ ಎಂದಿಗೂ ಜನತೆಗೆ ಬಿಟ್ಟುಕೊಡಲೇ ಇಲ್ಲ. ಆಗಲೂ ಜನತೆಯಿಂದ ದೊಡ್ಡ ಮೊತ್ತದ ತೆರಿಗೆಯನ್ನು ಸಂಗ್ರಹಿಸಿ ತನ್ನ ಬೊಕ್ಕಸವನ್ನು ತುಂಬಿಕೊಂಡಿತ್ತು. ಇನ್ನು ದರ ಏರಿಕೆಯಾದಾಗ ಅದರ ಸಂಪೂರ್ಣ ಭಾರವನ್ನು ಜನಸಾಮಾನ್ಯರ ಮೇಲೆ ಹೊರಿಸಿ ಕೈತೊಳೆದುಕೊಳ್ಳುತ್ತಿದೆ. ಇದು ಆಡಳಿತ ನಡೆಸುವ ಕ್ರಮವಲ್ಲ, ಇದು ದೇಶದ ಜನತೆಯ ಮೇಲಿನ ಘೋರ ಶೋಷಣೆಯಾಗಿದೆ.

ಮೋದಿ ಸರ್ಕಾರವು ಹಣದುಬ್ಬರ ನಿಯಂತ್ರಣ ಮಾಡುವಲ್ಲಿ, ಡಾಲರ್‌ ಎದುರು ರೂಪಾಯಿ ಮೌಲ್ಯದ ಕುಸಿತವನ್ನು ತಡೆಯುವಲ್ಲಿ, ದೇಶದ ಆರ್ಥಿಕ ನಿರ್ವಹಣೆಯಲ್ಲಿ ಹಾಗೂ ಒಟ್ಟಾರೆ ಸಾಮಾನ್ಯ ಜನರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ನರೇಂದ್ರ ಮೋದಿ ತನ್ನ ಉದ್ಯಮಿ ಮಿತ್ರರ ರಕ್ಷಣೆಗೆ ತೋರುವ ಆತುರ, ಕಾಳಜಿ ಹಾಗೂ ಬದ್ಧತೆಯಲ್ಲಿ ಸ್ವಲ್ಪವಾದರೂ ದೇಶದ ಜನತೆಯ ಮೇಲೆ ತೋರಿಸಲಿ ಎಂಬುದು ನಮ್ಮ ಮನವಿಯಾಗಿದೆ.

ಪೆಟ್ರೋಲ್‌, ಡೀಸೆಲ್‌ ದರ ತಲಾ 3 ರೂ. ಏರಿಕೆಯ ಜನವಿರೋಧಿ ನಡೆಯನ್ನು ನಾನು ಕಠಿಣವಾಗಿ ವಿರೋಧಿಸುತ್ತಿದ್ದೇನೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸುತ್ತಿದ್ದೇನೆ. ನಿರಂತರವಾಗಿ ಬೀಳುತ್ತಿರುವ ರೂಪಾಯಿ ಮೌಲ್ಯ, ಆರ್ಥಿಕ ನಿರ್ವಹಣೆಯ ವೈಫಲ್ಯ ಮತ್ತು ಸಾಮಾನ್ಯ ನಾಗರಿಕರ ಕುಟುಂಬಗಳನ್ನು ಸಂಕಷ್ಟಕ್ಕೆ ತಳ್ಳುತ್ತಿರುವುದರ ಹೊಣೆಯನ್ನು ಹೊತ್ತು ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಪಡಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.