ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಸುಮಾರು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗಾಗಿ 1,217 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಧಿಕಾರಿಗಳು ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಲಿದ್ದು, ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಣಾವಲಿಗೆ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.
ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಈ ವರ್ಷವೂ ವಸ್ತ್ರಸಂಹಿತೆ ಇರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಕೃಷ್ಣ ಮಾಹಿತಿ ನೀಡಿದ್ದಾರೆ.