ಬೆಂಗಳೂರು:ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ದ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಪ್ರತಿಪಕ್ಷ ನಾಯಕ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಗೊಳಿಸಿದೆ.
2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಧ್ಯಮಗಳಲ್ಲಿ ಕಾಂಗ್ರೆಸ್ "ಭ್ರಷ್ಟಾಚಾರ ರೇಟ್ ಕಾರ್ಡ್" ಜಾಹೀರಾತು ಪ್ರಕಟಿಸಿತ್ತು. ಇದರ ವಿರುದ್ಧ ರಾಜ್ಯ ಬಿಜೆಪಿ ಘಟಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.
ಕಾಂಗ್ರೆಸ್ ಬಿಡುಗಡೆ ಮಾಡಿದ್ದ ‘ಕರಪ್ಶನ್ ರೇಟ್ ಕಾರ್ಡ್’ ಜಾಹೀರಾತನ್ನು ರಾಹುಲ್ ಗಾಂಧಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರ ವಿರುದ್ಧ ಬಿಜೆಪಿ ಮುಖಂಡ ಕೇಶವಪ್ರಸಾದ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಮೊಕದ್ದಮೆಯನ್ನು ಪ್ರಶ್ನಿಸಿ ಪ್ರಶ್ನಿಸಿ ರಾಹುಲ್ ಗಾಂಧಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣದ ಸ್ವರೂಪ ಮತ್ತು ದಾಖಲೆಗಳನ್ನು ಪರಿಗಣಿಸಿ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದಾರೆ.