ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ವೈ ಮಹೇಶ್ವರ ರಾವ್ ಅವರು ಇಂದು ಬೆಳಿಗ್ಗೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು.
ಗಾಳಿ ಆಂಜನೇಯ ದೇವಸ್ಥಾನದ ಬಳಿ ವೃಷಭಾವತಿ ವ್ಯಾಲಿಯಲ್ಲಿ ಅಡ್ಡಲಾಗಿರುವ 66 ಕೆ.ವಿ. ಬೆಸ್ಕಾಂ ವಿದ್ಯುತ್ ಲೈನ್ ಅನ್ನು ಮೇಲ್ಭಾಗಕ್ಕೆ ಸ್ಥಳಾಂತರಿಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲಾವೃತ ಸಮಸ್ಯೆ ತಡೆಯಲು ಕ್ಯಾಚ್‌ಮೆಂಟ್ ಪಿಟ್ ಹಾಗೂ ಪಂಪ್ ವ್ಯವಸ್ಥೆ ಕಲ್ಪಿಸಲು ಮತ್ತು ನಾಗರಭಾವಿ ಮುಖ್ಯರಸ್ತೆಯಲ್ಲಿ ನಡೆಯುತ್ತಿರುವ 3.8 ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ನ್ಯೂ ಬಿಇಎಲ್ ರಸ್ತೆಯಲ್ಲಿ ಜಲಮಂಡಳಿಯ ಕಾಮಗಾರಿ ಬಳಿಕ ಪುನಶ್ಚೇತನ ಕಾರ್ಯ ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ತ್ವರಿತಗೊಳಿಸಲು ಆದೇಶ. ರಸ್ತೆ ಬದಿಯ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ವಿಜಯನಗರ ಬುಲೇ ಪಾರ್ಕ್, ಮೈಸೂರು ರಸ್ತೆ-ಕೆಂಗೇರಿ ಪ್ರವಾಹಪೀಡಿತ ಪ್ರದೇಶ ಹಾಗೂ ಆರ್.ಆರ್.ನಗರ ಬಿಇಎಂಎಲ್ ಲೇಔಟ್ ಒಣತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಅಗತ್ಯ ನಿರ್ದೇಶನಗಳನ್ನು ನೀಡಿದರು.
ಮಳೆಗಾಲದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರಿಶೀಲನೆ ವೇಳೆ ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ., ಬೆ.ಘ.ನಿ. ನಿಯಮಿತದ ಸಿಇಒ ಕರೀಗೌಡ, ಸಿಓಒ ರಮಾಮಣಿ, ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಸ್ವಯಂಪ್ರಭಾ, ಮಾದೇಶ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.