ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ಮರು ಸಮೀಕ್ಷೆಯ ವಿಶ್ಲೇಷಣಾ ವರದಿಯಲ್ಲಿ ಮಾಜಿ ದೇವದಾಸಿ ಮಹಿಳೆಯರ ಮೂರು ತಲೆಮಾರುಗಳ ಮಾಹಿತಿ, ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿಗಾಗಿ ಮಾಡಲಾಗಿರುವ ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದ 15 ಜಿಲ್ಲೆಗಳಲ್ಲಿರುವ ಮಾಜಿ ದೇವದಾಸಿ ಮಹಿಳೆಯರ ಮೂರು ತಲೆಮಾರುಗಳ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಮರು ಸಮೀಕ್ಷೆಯನ್ನು ನಡೆಸಲಾಗಿತ್ತು. ಈಗ ಬಂದಿರುವ ವರದಿಯನ್ನು ಆಧರಿಸಿ ಸರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಮಾಜಿ ದೇವದಾಸಿಯರ ಪುನರ್ವಸತಿಗಾಗಿ ಶಿಫಾರಸ್ಸುಗಳು:
ಶಾಲಾ ಕಾಲೇಜುಗಳಲ್ಲಿ ಹಾಗೂ ವಿವಿಧ ಅರ್ಜಿ ನಮೂನೆಗಳಲ್ಲಿ ತಂದೆಯ ಹೆಸರು ನಮೂದಿಸುವುದನ್ನು ಕಡ್ಡಾಯಗೊಳಿಸದಂತೆ ಕ್ರಮವಹಿಸುವುದು. ಹೆಚ್ಚಿನ ಸಂಖ್ಯೆಯಲ್ಲಿ ಎಸ್ ಸಿ, ಎಸ್ ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದು, ಶಿಕ್ಷಣಕ್ಕಾಗಿ ಆರ್ಥಿಕ ಸಹಾಯ ನೀಡಲು ವಿಶೇಷ ವಿದ್ಯಾರ್ಥಿವೇತನ ಯೋಜನೆ, ಆಯಾ ವರ್ಗದ ಇಲಾಖೆಗಳ ಮುಖಾಂತರ ಜಾರಿಯಲ್ಲಿರುವ ಶಿಕ್ಷಣಕ್ಕೆ ಸಂಬಂಧಿಸಿದ ವಸತಿ ಶಾಲೆಗಳ ಸೌಲಭ್ಯ, ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು, ವಿಶೇಷ ತರಬೇತಿಯನ್ನು ನೀಡಲು ಸಮೀಕ್ಷಾ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ.
ಚಿಕಿತ್ಸೆಗೆ ಅನುಕೂಲವಾಗಲು ಸರ್ಕಾರದಿಂದ ಒದಗಿಸುವ ವಿವಿಧ ಯೋಜನೆಗಳಡಿ ಆರೋಗ್ಯ ಸೌಲಭ್ಯವನ್ನು ಕಲ್ಪಿಸುವುದು ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ಗಳನ್ನು ವಿತರಿಸುವುದು, ಕೌಶಲ್ಯ ಅಭಿವೃದ್ಧಿ ತರಬೇತಿ/ಆರ್ಥಿಕ ಚಟುವಟಿಕೆಗಳಿಗೆ ಸಹಾಯಧನ ನೀಡಿ ಸ್ವಾವಲಂಬಿಗಳಾಗಿ ಬದುಕಲು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಶಿಫಾರಸ್ಸು ಮಾಡಲಾಗಿದೆ.
ಪುನರ್ವಸತಿ ಕಲ್ಪಿಸಲು ಸರ್ಕಾರವು ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಲು ಶಿಫಾರಸ್ಸು ಮಾಡಲಾಗಿದೆ.