2026-06-08 06:44:38

Rs 10 lakh deposit | ಕೃಷಿಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ರೂ 10 ಲಕ್ಷ ಠೇವಣಿ ಇಡಿ ಒತ್ತಾಯ | Speed News Kannada

Rs 10 lakh deposit | ಕೃಷಿಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ರೂ 10  ಲಕ್ಷ ಠೇವಣಿ ಇಡಿ ಒತ್ತಾಯ | Speed News Kannada

ಬೆಂಗಳೂರು: ಕೃಷಿಯಲ್ಲಿ ತೊಡಗಿಸಿಕೊಂಡಿರುವ ಯುವಕರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ರೂ. 10  ಲಕ್ಷ ಠೇವಣಿ ಇಡಬೇಕು ಎಂದು ರೈತ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.  ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ರೈತ ಸಂಘಟನೆಗಳು ಈ ಮನವಿ ಸಲ್ಲಿಸಿವೆ.
ರೈತ ಯುವಕರನ್ನು ವಿವಾಹವಾಗಲು ಹೆಣ್ಣು ಮಕ್ಕಳು ಮುಂದೆ ಬರುತ್ತಿಲ್ಲ. ಇದು ಒಂದು ಸಾಮಾಜಿಕ ಪಿಡುಗಾಗಿ ಪರಿವರ್ತನೆಯಾಗಿದೆ. ಈ ಸಮಸ್ಯೆಗೆ ಪರಿಹಾರ ರೂಪದಲ್ಲಿ ರೈತನನ್ನು ಮದುವೆಯಾಗುವ ಹೆಣ್ಣು ಮಗಳಿಗೆ ಸರ್ಕಾರಿ ಕೆಲಸದಲ್ಲಿ ಶೇ. 20ರಷ್ಟು ಮೀಸಲಾತಿ ನೀಡಬೇಕು ಎಂದೂ ಮನವಿ ಪತ್ರದಲ್ಲಿ ಆಗ್ರಹಪಡಿಸಲಾಗಿದೆ.
ಈ ವರ್ಷದ ಬಜೆಟ್‌ ನಲ್ಲಿ ಕೃಷಿವಲಯಕ್ಕೆ ಪ್ರಥಮ ಆಧ್ಯತೆ ನೀಡಬೇಕು. ವಿಧಾನಸಭಾ ಚುನಾವಣೆಯಲ್ಲಿ ಭರವಸೆ ನೀಡಿದ್ದಂತೆ  ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು. ಎಪಿಎಂಸಿ ಕಾಯ್ದೆಯನ್ನು ಮತ್ತಷ್ಟು ರೈತ ಸ್ನೇಹಿಗೊಳಿಸಬೇಕು. ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಜಾನುವಾರು ಹತ್ಯೆ ನಿಷೇದ ಮತ್ತು ಸಂರಕ್ಷಣಾ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಒಕ್ಕೂಟ ಆಗ್ರಹಿಸಿದೆ.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಕಾಯ್ದೆ- 2025, ಬೀಜ ಮಸೂದೆ- 2025. ಕೃಷಿ ಉತ್ಪನ್ನಗಳ ಮಾರುಕಟ್ಟೆ ರಾಷ್ಟ್ರೀಯ ಚೌಕಟ್ಟು ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಈ ಅಧಿವೇಶನದಲ್ಲಿ ಘೋಷಿಸಬೇಕು. ರೈತ ಸಂಘ ಸಂಸ್ಥಾಪಕ ಪ್ರೊ.ಎಂ.ಡಿ. ನಂಜುಂಡಸ್ವಾಮಿರವರ ಹುಟ್ಟೂರು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಮಾಡ್ರಹಳ್ಳಿ ಗ್ರಾಮವನ್ನು ಮಾದರಿ ಗ್ರಾಮವಾಗಿ ಮಾಡಲು ವಿಶೇಷ ಅನುದಾನ ನೀಡಬೇಕು ಮತ್ತು ಅವರ ವಿಚಾರಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಬೇಕು. ಎಂದೂ ರೈತ ಸಂಘಟನೆಗಳು ಒತ್ತಾಯಿಸಿವೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.