ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬರೋಬ್ಬರಿ ರೂ.66 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಮೇ 22 ರಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಬೆಂಗಳೂರು ನಗರ ಜಿಲ್ಲೆ ಉಪ ಆಯುಕ್ತ ಭರತೇಶ್ ನೇತೃತ್ವದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಹಾಗೂ ರೈಲ್ವೆ ಭದ್ರತಾ ಸಿಬ್ಬಂದಿಯೊಂದಿಗೆ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿರುವ ಎ.ವಿ.ಜಿ ಲಾಜಿಸ್ಟಿಕ್ಸ್ ಲಿಮಿಟೆಡ್ ಪಾರ್ಸಲ್ ಗೋಡೌನ್ ಮುಂಭಾಗದಲ್ಲಿ ದಾಳಿ ನಡೆಸಿ 74 ರಟ್ಟಿನ ಪೆಟ್ಟಿಗೆಗಳಲ್ಲಿ ವಿವಿಧ ಮಾದರಿಯ ಪ್ರೀಮಿಯಂ ಬ್ರಾಂಡ್ ನ ಸಿಂಗಲ್ ಮಾಲ್ಟ್ ವಿಸ್ಕಿ/ವೋಡ್ಕ ಸೇರಿದಂತೆ 1118 ಬಾಟಲಿಗಳು ಒಟ್ಟು 1042 ಲೀಟರ್ ಶಂಕಿತ ನಕಲಿ ವಿದೇಶಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಅಂದಾಜು ಮೌಲ್ಯ 66 ಲಕ್ಷ ರೂ ಅಗಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಚಿವ ಆರ್ ಬಿ ತಿಮ್ಮಾಪೂರ ಅವರು ಹೊರ ರಾಜ್ಯ ಹಾಗೂ ಹೊರ ದೇಶಗಳಿಂದ ಅಕ್ರಮವಾಗಿ ಮದ್ಯ ಸಾಗಿಸುವವರ ವಿರುದ್ಧ ಹದ್ದಿನ ಕಣ್ಣಿಡುವಂತೆ ಸೂಚಿಸಿದ್ದಾರೆ. ಅದರಂತೆ ಭರ್ಜರಿ ಕಾರ್ಯಾಚರಣೆ ಮೂಲಕ ಶಂಕಿತ ವಿದೇಶಿ ಹಾಗೂ ಹೊರ ರಾಜ್ಯದಿಂದ ಅಕ್ರಮವಾಗಿ ಸಾಗಾಟ ಮಾಡಿದ್ದ ಸಾವಿರಾರು ಲೀಟರ್ ಮದ್ಯವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಸಿಬ್ಬಂದಿ ಕಾರ್ಯವನ್ನು ಸಚಿವರು ಶ್ಲಾಘಿಸಿದ್ದಾರೆ.