ತುಮಕೂರು: ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ದೂರು ದಾಖಲಾದ 24 ತಾಸಿನಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ತುಮಕೂರು ಪೊಲೀಸರು ಯಶಸ್ವಿಯಾಗಿದ್ದಾರೆ. 26 ವರ್ಷದ ರೇಣುಕಾ ಬಂಧಿತ ಆರೋಪಿ. ತುಮಕೂರು ತಾಲ್ಲೂಕಿನ ಹಾಲನೂರು ಅದ್ಲಾಪುರ ಗ್ರಾಮದ ನಿವಾಸಿಯಾದ ಆರೋಪಿ, ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಒಂಟಿ ಬಾಲಕಿಯನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದ. ವಿಷಯ ತಿಳಿದ ಕೂಡಲೇ ಬಾಲಕಿಯ ಪೋಷಕರು ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಸ್ವೀಕರಿಸಿದ ತಕ್ಷಣ ಕಾರ್ಯಪ್ರವೃತ್ತರಾದ ಗುಬ್ಬಿ ಠಾಣೆ ಪೊಲೀಸರು ತನಿಖೆ ಆರಂಭಿಸಿ, ಆರೋಪಿ ವಿರುದ್ಧ ಸಾಕ್ಷ್ಯ ಸಂಗ್ರಹಿಸಿ 24 ಗಂಟೆಯೊಳಗೆ ಬಂಧಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದರೂ, ಆರೋಪಿಯ ಬಂಧನದಿಂದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆ ಮುಂದುವರಿಸಿದ್ದು, ಮಕ್ಕಳ ಸುರಕ್ಷತೆಗಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.